ದಾವಣಗೆರೆ ಡಿ.05: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಶನಿವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರನ್ನು ಭೇಟಿ ಮಾಡಿ, ಭದ್ರಾ ಕಾಲುವೆ, ನಾಲೆಗಳಲ್ಲಿ ಹೂಳು ತೆಗೆಸುವಂತೆ ಮನವಿ ಮಾಡಿದರು.
ಈ ವೇಳೆ ಅವರು ಮಾತನಾಡಿ, ಭದ್ರಾ ಜಲಾಶಯದಿಂದ ಕಾಲುವೆ ಹಾಗೂ ನಾಲೆಗಳಿಗೆ ನೀರು ಹರಿಸುವುದನ್ನು ಈಗಾಗಲೇ ನಿಲ್ಲಿಸಿದ್ದು, ನಾಲೆ ಹಾಗೂ ಕಾಲುವೆಗಳಲ್ಲಿ ಸಾಕಷ್ಟು ಹೂಳು(ಸಿಲ್ಟ್) ತುಂಬಿಕೊಂಡು ಅಚ್ಚುಕಟ್ಟು ಭಾಗದ ಕೊನೆಯ ಭಾಗದ ರೈತರಿಗೆ ನೀರು ತಲುಪದೇ ಅನಾನುಕೂಲವಾಗಿದ್ದು, ಸೂಕ್ತ ರೀತಿಯಲ್ಲಿ ಬೆಳೆ ಬೆಳೆಯಲು ಸಮಸ್ಯೆಯಾಗಿದೆ. ರೈತರು ಆರ್ಥಿಕವಾಗಿ ಸಬಲರಾಗಲು ಹಿನ್ನೆಡೆಯಾಗಿದ್ದು, ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳು ತೆಗೆಯುವ ಕಾಮಗಾರಿ ಕೈಗೆತ್ತಿಕೊಂಡು ನಾಲೆ ಹಾಗೂ ಕಾಲುವೆಗಳಲ್ಲಿ ತುಂಬಿಕೊಂಡಿರುವ ಹೂಳು ತೆಗೆಸಿಕೊಂಡುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸಿಇಓ ವೈಶಾಲಿ, ನಿಮ್ಮ ಮನವಿಯನ್ನು ಪುರಸ್ಕರಿಸುತ್ತೇನೆ. ಅತಿ ಶೀಘ್ರವಾಗಿ ಈ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದರು.