ಭಾರತ್ ಬಂದ್ ಗೆ ಬೆಂಬಲಿಸಿ ಕುರುಗೋಡಲ್ಲಿ ಪ್ರತಿಭಟನೆ

Share and Enjoy !

Shares
Listen to this article

 

ವಿಜಯನಗರವಾಣಿ ಸುದ್ದಿ
ಬಳ್ಳಾರಿ ಜಿಲ್ಲೆ

ಕುರುಗೋಡು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಹಾಗು ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಮೇಲಿನ ದೌರ್ಜನ್ಯ ಖಂಡಿಸಿ ರೈತ ಸಂಘಟನೆಗಳು ಮಂಗಳವಾರದಂದು ದೇಶಾದ್ಯಂತ ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ಸೂಚಿಸಿ ಕುರುಗೋಡಲ್ಲಿ ವಿವಿಧ ರೈತಪರ-ಕರ್ನಾಟಕ ಪ್ರಾಂತ ರೈತ ಸಂಘ, ಕಾರ್ಮಿಕ-ದಲಿತ-ಜನಪರ ಸಂಘಟನೆಗಳು ಒಗ್ಗೂಡಿ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ತಿಪ್ಪೇಸ್ವಾಮಿ, ಗಾಳಿ ಬಸವರಾಜ್, ವಿಶ್ವನಾಥ ಸ್ವಾಮಿ ಮಾತನಾಡಿ, ರೈತರ ಪಾಲಿಗೆ ಮರಣಶಾಸನವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ನಿಟ್ಟಿನಲ್ಲಿ ರೈತರು ದೇಶಾದ್ಯಂತ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ‌. ದೇಶದ ರಾಜಧಾನಿ ದೆಹಲಿಯನ್ನು ಪ್ರವೇಶಿಸಲು ಮುಂದಾದ ಪ್ರತಿಭಟನಾ ನಿರತ ರೈತರನ್ನು ರಸ್ತೆಯಲ್ಲೆ ತಡೆದು ಅವರ ವಿರುದ್ಧ ಅಶ್ರುವಾಯು, ಫಿರಂಗಿ ಪ್ರಯೋಗಿಸಿದ ಕೇಂದ್ರ ಸರ್ಕಾರದ ದೌರ್ಜನ್ಯವನ್ನು ಬಲವಾಗಿ ಖಂಡಿಸುತ್ತೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿ ತಂದ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಮೂರು ನೂತನ ಕೃಷಿ ಕಾಯ್ದೆಗಳು ರೈತರ ಪಾಲಿಗೆ ಅಕ್ಷರಶಃ ಮುಳ್ಳಾಗಿ ಪರಿಣಮಿಸಲಿವೆ. ಈ ಹಿನ್ನೆಲೆಯಲ್ಲಿ ನೂತನ ಮೂರು ಕಾಯ್ದೆಗಳನ್ನು ಕೂಡಲೆ ರದ್ದುಗೊಳಿಸಿ ಆದೇಶ ಹೊರಡಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆಗ್ರಹಿಸಲಾಯಿತು.
ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಅಸಮಾಧಾನ ಹೊರಹಾಕಿದರು.ಪಟ್ಟಣದ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ ಪ್ರಮುಖ ಬೀದಿಗಳಲ್ಲಿ ಸಾಗಿ ಮುಖ್ಯ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ಪ್ರತಿಭಟನಾಕಾರರು ರಾಷ್ಟ್ರಪತಿ ಕಾರ್ಯಾಲಯಕ್ಕೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು

Share and Enjoy !

Shares