ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಅವರಿಗೆ ತಲುಪಿಸುವ ಕೆಲಸ ಮಾಡಿ, ಬಾಕಿ ಇರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿಯಲ್ಲಿ ಅಲ್ಪ ಸಂಖ್ಯಾತರಿಗೆ ನೀಡಬೇ ಕಾದ ಅನುದಾನದ ಸಮರ್ಪಕ ಬಳಕೆಯಾಗಲಿ, ಯಾವುದೇ ರೀತಿಯಲ್ಲಿ ಹಣ ವ್ಯಥ್ರ್ಯವಾಗದಂತೆ ನೋಡಿಕೊಳ್ಳಿ; ಇಲಾಖಾವಾರು ನೀಡಲಾಗಿರುವ ಗುರಿ ಸಾಧಿಸಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಅವರು ಹೇಳಿದರು.
ಬಾಕಿ ಉಳಿದಿರುವ ಕಾರ್ಯಗಳನ್ನು ಆದಷ್ಟು ಬೇಗ ಮುಗಿಸಿ, ಮುಂದಿನ ಸಭೆಯೊಳಗೆ ಶೇ.100 ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಸೂಚಿಸಿದರು. 2021-22 ನೇ ಸಾಲಿನಲ್ಲಿ ಕ್ಷಯರೋಗ ನಿಯಂತ್ರಾ ಕಾರ್ಯಕ್ರಮದಡಿಯಲ್ಲಿ 113 ಜನ ಅಲ್ಪ ಸಂಖ್ಯಾತರಿಗೆ, ಅಂದತ್ವ ನಿವಾರಣೆ ಕಾರ್ಯಕ್ರಮದಡಿಯಲ್ಲಿ 601 ಜನ ಅಲ್ಪ ಸಂಖ್ಯಾತರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಸಭೆಗೆ ತಿಳಿಸಿದರು.
2020-21 ನೇ ಸಾಲಿನ ಎನ್‍ಎಸ್‍ಪಿ ವಿದ್ಯಾರ್ಥಿ ವೇತನಕ್ಕೆ 5214 ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು, 812 ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6026 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದರಲ್ಲಿ 1931 ಅರ್ಜಿಗಳು ಮಂಜೂರಾಗಿದ್ದು, ಪ್ರಸಕ್ತ ಸಾಲಿನ ಎಸ್‍ಎಸ್‍ಪಿ ವಿದ್ಯಾರ್ಥಿ ವೇತನಕ್ಕೆ ಆ.31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನಾಶ್ ಅವರು ಸಭೆಗೆ ವಿವರಿಸಿದರು. ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಈ ಸಮಯದಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.