ಆರೋಗ್ಯವಂತ ಮಹಿಳೆಯರಿಂದ ಮಾತ್ರ ಆರೋಗ್ಯಯುಕ್ತ ಸಮಾಜ ನಿರ್ಮಾಣ ಸಾಧ್ಯ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಾಟೀಲ ಶಶಿ

Share and Enjoy !

Shares
Listen to this article

ಧಾರವಾಡ: ಮಾ.06: ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಮಹಿಳೆಯರ ಅರೋಗ್ಯವೂ ಮುಖ್ಯವಾಗಿದೆ. ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾದ ಮಹಿಳೆಯರಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಅಧಿಕಶರಿ ಡಾ. ಪಾಟೀಲ ಶಶಿ ಅವರು ತಿಳಿಸಿದರು.

ಅವರು ಇಂದು ಬೆಳಿಗ್ಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಘಟಕದಿಂದ ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿತ ಹಾಗೂ ಪಾಶ್ರ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ಆರೋಗ್ಯ ಇಲಾಖೆ ಆವರಣದಿಂದ ಜನಜಾಗೃತಿಗಾಗಿ ಆಯೋಜಿಸಿದ್ದ ಸೈಕ್ಲೋಥಾನ್ ಜಾಥಾಗೆ ಚಾಲನೆ ನೀಡಿ, ಮಾತನಾಡಿದರು.

ಮಹಿಳೆಯರು ತಮ್ಮ ದಿನನಿತ್ಯದ ಕಾರ್ಯ, ಒತ್ತಡಗಳ ನಡುವೆಯೂ ಯೋಗ, ನಡಿಗೆ, ವ್ಯಾಯಾಮಗಳಿಗೆ ಸ್ವಲ್ಪ ಸಮಯ ಮೀಸಲಿಡಬೇಕು. ಪೌಷ್ಟಿಕ ಆಹಾರ ಸೇವಿಸಬೇಕು. ವಿಶ್ರಾಂತಿ ಪಡೆಯಬೇಕು. ಮಹಿಳೆಯರು ನೆಮ್ಮದಿ, ಆರೋಗ್ಯವಂತರಾಗಿ ಇದ್ದಾಗ ಮಾತ್ರ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ನಿಗಾವಹಿಸಿ, ಅಗತ್ಯ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಆರೋಗ್ಯವಂತ ಮಹಿಳೆಯರಿಂದ ಆರೋಗ್ಯಕರ ಭಾರತ ಎಂಬ ಘೋಷವಾಕ್ಯದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಮಹಿಳಾ ದಿನಾಚರಣೆ ಆಚರಿಸುತ್ತಿದ್ದೇವೆ. ಆರೋಗ್ಯ ಇಲಾಖೆಯ ವಿವಿಧ ಯೋಜನಾ ಅನುಷ್ಠಾನ ಘಟಕಗಳ ಹಾಗೂ ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆ, ಎನ್.ಸಿ.ಡಿ.ಘಟಕಗಳ ಮೂಲಕ ವರ್ಷಪೂರ್ತಿ ಮಹಿಳೆಯರ ಆರೋಗ್ಯಕ್ಕೆ ಸಂಬಂದಿಸಿದ ತಪಾಸಣೆ, ಚಿಕಿತ್ಸೆ ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಡಿಎಚ್‍ಓ ಅವರು ತಿಳಿಸಿದರು.

ಮಹಿಳೆಯರಿಗೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಮುಖ್ಯ. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಮೂಲಕ ಮಹಿಳೆಯರಿಗೆ ಆಪ್ತ ಸಮಾಲೋಚನೆ ಶಿಬಿರಗಳನ್ನು ನಡೆಸಲಾಗುತ್ತದೆ. ಮಹಿಳೆಯರು ಸೇರಿದಂತೆ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಾಟೀಲ ಶಶಿ ಅವರು ಹೇಳಿದರು.

ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ.ಸುಜಾತಾ ಹಸವಿಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ,  ಅಹಿತಕರ ಆಹಾರ ಪದ್ದತಿ, ದೈಹಿಕ ಶ್ರಮ ಇಲ್ಲದಿರುವುದು ಮತ್ತು ವ್ಯಸನಗಳಾದ ಮದ್ಯಪಾನ ಹಾಗೂ ತಂಬಾಕು ಸೇವನೆ, ಅತಿಯಾದ ಮಾನಸಿಕ ಒತ್ತಡಗಳು ಅಸಾಂಕ್ರಾಮಿಕ ರೋಗಗಳ ಪ್ರಮುಖ ಆಪಾಯಕಾರಿ ಅಂಶಗಳಾಗಿವೆ. ಇವು ದಿನನಿತ್ಯದ ಕಾರ್ಯಗಳು ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಇದರ ಪರಿಹಾರಕ್ಕಾಗಿ ಮಹಿಳೆಯರು ಸೇರಿ ಸಾರ್ವಜನಿಕರು  ನಿಯಮಿತ ಆಹಾರ ಸೇವನೆ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವದಕ್ಕಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ. ಅಸಾಂಕ್ರಾಮಿಕ ರೋಗಗಳ ಕುರಿತು ಸೈಕ್ಲೋಥಾನ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಹಸವಿಮಠ ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನಾ ಅನುಷ್ಠಾನ ಅಧಿಕಾರಿಗಳು, ಜಿಲ್ಲಾ ಸಮೀಕ್ಷಣಾ ಘಟಕದ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸೈಕಲ್ ಜಾಥಾದಲ್ಲಿ ಪ್ರಜಂಟೆಶನ್ ಬಾಲಕೀಯರ ಪ್ರೌಢಶಾಲಾ ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿ, ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

Share and Enjoy !

Shares