ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಅರ್ಜಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾಗಿರುವ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಇದೀಗ ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆಯಾಗಿದೆ.
ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮೂವರ ಭಾವಚಿತ್ರವಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಅರ್ಜಿ ನಮೂನೆಯಲ್ಲಿದೆ.
ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು.
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.