Ad image

ದ್ವಿತೀಯ ಪಿಯು ಪರೀಕ್ಷೆ-3 – ಜಿಲ್ಲೆಯಲ್ಲಿ 737 ವಿದ್ಯಾರ್ಥಿಗಳು

Vijayanagara Vani
ದ್ವಿತೀಯ ಪಿಯು ಪರೀಕ್ಷೆ-3 – ಜಿಲ್ಲೆಯಲ್ಲಿ 737 ವಿದ್ಯಾರ್ಥಿಗಳು

ಕಾರವಾರ. ಜೂ.21 ಜಿಲ್ಲೆಯಲ್ಲಿ ಜೂನ್ 27 ರಿಂದ ಜುಲೈ 5 ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 737 ವಿದ್ಯಾರ್ಥಿಗಳು ಹಾಜರಾಗಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹೇಳಿದರು.

ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪರೀಕ್ಷಾ ಗೋಪ್ಯತೆ ಮತ್ತು ಪಾವಿತ್ರöಯತೆಗೆ ಯಾವುದೇ ಭಂಗ ಉಂಟಾಗದ0ತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಕೆ ಮತ್ತು ವೆಬ್ ಕ್ಯಾಸ್ಟಿಂಗ್ ಮಾಡುವಂತೆ ತಿಳಿಸಿದ ಅವರು, ಸೂಕ್ತ ಪೊಲೀಸ್ ಭದ್ರತೆಯಲ್ಲಿ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಭದ್ರತೆಯನ್ನು ಒದಗಿಸುವಂತೆ ತಿಳಿಸಿದರು.

ಮಳೆಗಾಲವಾಗಿರುವ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಯಾವುದೇ ತೊಂದರೆಯಾಗದAತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಶೌಚಾಲಯ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಅನಗತ್ಯ ಗೊಂದಲ ಮೂಡಿಸಿ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಪ್ರಶ್ನೆಪತ್ರಿಕೆ ಸಾಗಿಸುವ ವಾಹನಗಳಿಗೆ ಜಿ.ಪಿಎಸ್. ಅಳವಡಿಸಬೇಕು. ಪ್ರಶ್ನೆ ಪತ್ರಿಕೆ ವಿತರಿಸಲು ಸೂಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ಮಾರ್ಗಾಧಿಕಾರಿಗಳ ನೇಮಕ ಮಾಡುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನಿಯೋಜನೆ ಮಾಡುವಂತೆ ತಿಳಿಸಿದರು.

ಪರೀಕ್ಷೆ ನಡೆಯುವ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಕೆಯಾಗುವಂತೆ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಎಲ್ಲಾ ಪರೀಕ್ಷೆಗಳನ್ನು ಅತ್ಯಂತ ಯಶಸ್ವಿಯಾಗಿ, ಯಾವುದೇ ದೂರುಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗಿದ್ದು, ಪ್ರಸ್ತುತ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ್ ಹಾಗೂ ಜಿಲ್ಲೆಯ ವಿವಿಧ ಕಾಲೇಜುಗಳ ಮುಖ್ಯಸ್ಥರು ಮತ್ತಿತರರು ಹಾಜರಿದ್ದರು.

Share This Article
error: Content is protected !!
";