Ad image

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗುವಂತೆ ನೋಡಿಕೊಳ್ಳಿ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Vijayanagara Vani
ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗಿಯಾಗುವಂತೆ ನೋಡಿಕೊಳ್ಳಿ – ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
—-
ಕೊಪ್ಪಳ ಜೂನ್ 06 : ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಎಲ್ಲರ ಸಹಭಾಗೀತ್ವ ಬಹುಮುಖ್ಯವಾಗಿದ್ದು, ಸೂಕ್ತ ಪ್ರಚಾರ ಕೈಗೊಂಡು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತಂತೆ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜೂನ್ 21 ರಂದು ಕೊಪ್ಪಳದ ತಾಲ್ಲೂಕು ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಡಿಸಲಾಗುವುದು. ಅಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಯೋಗಭ್ಯಾಸ ನಡೆಯಲಿದೆ. ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತಾಗಲು, ಆಯುಷ್ ಅಧಿಕಾರಿಗಳು, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಮತ್ತು ವಸತಿ ಶಿಕ್ಷಣ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಯೋಗ ದಿನಾಚರಣೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಲಘು ಉಪಹಾರದ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯ ಪಾಲ್ಗೊಳ್ಳಬೇಕು. ಯೋಗಭ್ಯಾಸದ ನಂತರ ಪ್ರಜಾಪಿತ ಬ್ರಹ್ಮಕುಮಾರಿ ಅವರಿಂದ ಧ್ಯಾನದ ಮಹತ್ವ ಕುರಿತು ಉಪನ್ಯಾಸ ಇರಲಿದೆ. ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು ಮತ್ತು ಯೋಗಾಸನಕ್ಕೆ ಸಂಬಂಧಿಸಿದಙತೆ ಅಗತ್ಯ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ದಿನದಂದು ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಪೊಲೀಸ್ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಧ್ಯಮವರು, ವಕೀಲರು, ಪೊಲೀಸರು ಹಾಗೂ ಮಾಜಿ ಸೈನಿಕರಿಗೆ ಮಾಹಿತಿ ನೀಡಬೇಕು ಎಂದು ಆಯುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಪಿ.ಬಿ.ಹಿರೇಗೌಡರ ಅವರು ಮಾತನಾಡಿ, ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಈ ಬಾರಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಯೋಗ ದಿನಾಚರಣೆ ನಡೆಸಲು ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶ ಪರಶುರಾಂ ಶೆಟ್ಟಪ್ಪನವರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಆಹಾರ ಇಲಾಖೆ ಉಪನಿರ್ದೇಶ ಸೋಮಶೇಖರ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಬಸವರಾಜ, ಕೊಪ್ಪಳ ಜಿಲ್ಲೆಯ ಆಯುಷ್ ವೈದ್ಯಾಧಿಕಾರಿಗಳಾದ ಡಾ.ಗುರುರಾಜ್ ಉಮಚಗಿ, ಡಾ.ಯಮನಪ್ಪ ಶಿರವಾರ, ಡಾ.ರಾಜಶೇಖರ ನಾರಿನಾಳ, ಡಾ. ಕವಿತಾ ಹೆಚ್.ಎಫ್., ಡಾ.ಶರಣಪ್ಪ ಹೈದ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಯುಷ್ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share This Article
error: Content is protected !!
";