Ad image

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಬೇಕು: ಸಚಿವ ಶಿವರಾಜ್ ಎಸ್. ತಂಗಡಗಿ

Vijayanagara Vani
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಬೇಕು: ಸಚಿವ ಶಿವರಾಜ್ ಎಸ್. ತಂಗಡಗಿ
ಕೊಪ್ಪಳ ಜುಲೈ 07 ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಆಗಸ್ಟ್ 4 ರಂದು ಕೊಪ್ಪಳ ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಜನರನ್ನು ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಹೇಳಿದರು.
ಆಗಸ್ಟ್ 04 ರಂದು ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಸೋಮವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳ 5 ವಿಧಾನಸಭಾ ಕ್ಷೇತ್ರಗಳಿಂದ ಒಂದು ಲಕ್ಷ ಫಲಾನುಭವಿಗಳನ್ನು ಕರೆತರಬೇಕು. ದೊಡ್ಡ ಕಾರ್ಯಕ್ರಮ ಆಗಿರುವುದರಿಂದ ಯಾವುದೇ ಸಮಸ್ಯೆಗಳಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಇತರೆ ಸಂಬAಧಿಸಿದ ಅಧಿಕಾರಿಗಳು ಸಭೆ ನಡೆಸಿ ಫಲಾನುಭವಿಗಳ ಪಟ್ಟಿ ತಯಾರಿಸಿ ಅವರನ್ನು ಕಾರ್ಯಕ್ರಮಕ್ಕೆ ಕರೆತರಬೇಕೆಂದರು.
ಮಳೆಗಾಲ ಇರುವುದರಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜರ್ಮನ್ ಟೆಂಟ್ ಹಾಕಬೇಕು ಮತ್ತು ಕಾರ್ಯಕ್ರಮಕ್ಕೆ ಬರುವ ಜನರಿಗೆ ಅನುಕೂಲವಾಗಲು ಹೆಚ್ಚಿನ ಸಂಖ್ಯೆಯಲ್ಲಿ ಕುರ್ಚಿಗಳನ್ನು ಹಾಕುವ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ತಮ್ಮ- ತಮ್ಮ ಇಲಾಖೆಯಲ್ಲಿರುವ ಯಾವುದೇ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳ ಪಟ್ಟಿಯನ್ನು ನೀಡಬೇಕು. ಮುಂದಿನ ಮತ್ತೊಂದು ಸಭೆ ಕರೆಯುವುದರೊಳಗೆ ತಾವು ಎಲ್ಲಾ ಮಾಹಿತಿ ನೀಡಬೇಕೆಂದರು.
ವಿವಿಧ ಇಲಾಖೆಯ ಫಲಾನುಭವಿಗಳು ಮತ್ತು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಬೇಕು. ಅವರನ್ನು ಕರೆತರಲು ಬಸ್ಸುಗಳ ವ್ಯವಸ್ಥೆ ಮಾಡಬೇಕು. ನಮ್ಮ ಜಿಲ್ಲೆಯ ಬಸ್ಸುಗಳು ಸಾಲದಿದ್ದರೆ ಅಕ್ಕ- ಪಕ್ಕದ ಜಿಲ್ಲೆಯ ಬಸ್ಸುಗಳನ್ನು ತರಿಸಬೇಕು. ಒಂದೊAದು ಬಸ್ಸಿಗೆ ಜನರನ್ನು ಕರೆತರಲು ಆಯಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಬೇಕು. ವಿವಿಧ ಇಲಾಖೆಯ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಒಂದೇ ಸಲ ಮಾಡುವುದರಿಂದ ನಮ್ಮ ಜಿಲ್ಲೆಯಿಂದ ದೊಡ್ಡ ಸಂದೇಶ ಹೋದಂತಾಗುತ್ತದೆ ಎಂದು ಹೇಳಿದರು.
ವಿವಿಧ ಇಲಾಖೆಯ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳು, ಜಿಲ್ಲೆಯ ವಿವಿಧ ತಾಲ್ಲೂಕಿನ ಪ್ರಜಾಸೌಧ, ಆಸ್ಪತ್ರೆ ಸೇರಿದಂತೆ ಹಲವಾರು ಕಾರ್ಯಕ್ರಮ ಇರುವುದರಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಸಂಬAಧಪಟ್ಟವರ ಜೊತೆಗೆ ಮಾತನಾಡಬೇಕು. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಬೇಕು. ನಮ್ಮ ಕಲ್ಯಾಣ ಕರ್ನಾಟಕ ಭಾಗದ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಬೇಕೆಂದು ಹೇಳಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ಗ್ರಾಮ ಪಂಚಾಯತಿಯಿಂದ ಮಾಡಬೇಕು. ಕಾರ್ಯಕ್ರಮಕ್ಕೆ ಬರಲು ಎಷ್ಟು ಬಸ್ಸುಗಳು ಬೇಕಾಗುತ್ತವೆ ಎಂದು ಮುಂಚಿತವಾಗಿ ಪಟ್ಟಿ ತಯಾರಿಸಿರಬೇಕು. ಜನರನ್ನು ಕರೆದುಕೊಂಡು ಹೋಗಿ ಬರಲು ಪ್ರತಿ ಬಸ್ಸಿಗೆ ಒಬ್ಬರನ್ನು ನಿಯೋಜನೆ ಮಾಡಬೇಕೆಂದು ಹೇಳಿದರು.
ಈ ಸಭೆಯಲ್ಲಿ ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹೇಮಂತ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರೇಶಪ್ಪ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
error: Content is protected !!
";