ಕವಿತಾಳ: ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಸಮೀಪದ ಲಕ್ಷೀ ನಾರಾಯಣ ಕ್ಯಾಂಪ್ ನಲ್ಲಿರುವ ಕುಡಿಯುವ ನೀರಿನ ಕೆರೆಗೆ ಸಿರವಾರ ತಹಶೀಲ್ದಾರ್ ರವಿ ಎಸ್. ಅಂಗಡಿ ಭೇಟಿ ನೀಡಿ ಪರಿಶೀಲಿಸಿದರು.
ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಹಾಗೂ ಮಾನ್ವಿ ಶಾಸಕರ ಸೂಚನೆ ಮೇರೆಗೆ ಭೇಟಿ ನೀಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಕಾರಣದಿಂದಾಗಿ ಜೂನ್ 15ರಿಂದ 25ರವರೆಗೆ ಡ್ಯಾಮ್ ನಿಂದ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಪಟ್ಟಣ ಪಂಚಾಯತಿ ಹಾಗೂ ಕಂದಾಯ ಅಧಿಕಾರಿಗಳು ಕೆರೆಗೆ ನೀರು ತುಂಬಿಸಿ, ನೀರು ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಕಟ್ಟುನಿಟ್ಟಾಗಿ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ 15 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಡ್ಯಾಮ್ ಗಳಲ್ಲಿ ನೀರು ಶೇಖರಣೆಯಾಗುತ್ತಿದೆ. ಸಾರ್ವಜನಿಕರಿಗೆ ನೀರಿನ ತೊಂದರೆ ಇರುವುದರಿಂದ ಸರ್ಕಾರದ ಗಮನಕ್ಕೆ ತರಲಾಗಿದ್ದು, ಡ್ಯಾಮ್ ನಿಂದ ನೀರು ಹರಿಸಿ ಕೆರೆಗಳ ಬರ್ತಿಗೆ ಸೂಚಿಸಿದ್ದಾರೆ. ಕೂಡಲೇ ಪಂಚಾಯತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳನ್ನು ತುಂಬಿಸಿಕೊಂಡು ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೇಳಿದರು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆ ಅಧಿಕಾರಿ ವಿಜಯಲಕ್ಷ್ಮಿ ಪಾಟೀಲ್, ಉಪ ತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ್,
ಪ.ಪಂ.ಸಿಬ್ಬಂದಿ ರಾಘವೇಂದ್ರ ಸೇರಿದಂತೆ ಪ.ಪಂ.ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.