ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾಗಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್ ಅವರು ಸೂಚಿಸಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಲೋಪದೋಷ ಹಾಗೂ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಸರ್ಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯ ಸಹಸ್ರಾರು ಕುಟುಂಬಗಳು ಏಳಿಗೆ ಕಾಣುತ್ತಿವೆ. ಅನುಷ್ಠಾನ ಸಮಿತಿಯ ಕಾರ್ಯಕರ್ತರು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಯೋಜನೆ ತಲುಪಿದ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗ ಪಡೆಯದ ಜನರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ಯೋಜನೆ ಫಲಾನುಭವಿಗಳಿಗೆ ಮುಟ್ಟುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅಹವಾಲು ಅಥವಾ ಮಾಹಿತಿ ಬೇಕಾದಲ್ಲಿ ಅಲೆದಾಡಿಸದೇ ಸೂಕ್ತ ಪರಿಹಾರವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಒದಗಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಅವರು, ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಒಟ್ಟು 3,11,180 ಪಡಿತರ ಚೀಟಿಗಳು ಇದ್ದು, ಅದರಲ್ಲಿ ಅಂತ್ಯೋದಯ, ಎಪಿಎಲ್, ಬಿಪಿಎಲ್ ಕಾರ್ಡ್ ಫಲಾನುಭವಿಗಳು ಸೇರಿ 2,81,987 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ಮಾಹೆ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ರೂ.55 ಕೋಟಿ ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣ ಜಮಾ ಆಗದೇ ಇದ್ದವರು ಎನ್ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ ಇ-ಕೆವೈಸಿ ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲ ಎಂದರು.
ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಈಗಾಗಲೆ ಸರ್ಕಾರವು ಖಚಿತ ಪಡಿಸಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಇನ್ನುಳಿದ ಗ್ಯಾಂರಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ವಿವರಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಗ್ಯಾರಂಟಿ ಯೋಜನೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.