ಚಿತ್ರದುರ್ಗ
ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸಲಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಮಾರ್ಗವಾಗಿ ಇದೇ ಜುಲೈ 09ರಂದು ಚಿತ್ರದುರ್ಗ ಜಿಲ್ಲೆಗೆ ಪ್ರವೇಶಿಸಲಿದೆ. ಕರ್ನಾಟಕ ಜ್ಯೋತಿ ರಥಯಾತ್ರೆಗೆ ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಸ್ವಾಗತಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಕರ್ನಾಟಕ ಸಂಭ್ರಮ-50ರ ಅಂಗವಾಗಿ ರಥಯಾತ್ರೆಯನ್ನು ಗೌರವದಿಂದ ಬರಮಾಡಿಕೊಳ್ಳುವ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಸಂಬಂಧ ಈಗಾಗಲೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜ್ಯೋತಿ ರಥಯಾತ್ರೆಯು ಜುಲೈ 09 ರಂದು ಚನ್ನಗಿರಿಯಿಂದ ಹೊರಟು, ಬೆಳಿಗ್ಗೆ 09 ಗಂಟೆಗೆ ಹೊಳಲ್ಕೆರೆಗೆ ಆಗಮಿಸಲಿದೆ, ಇಲ್ಲಿ ರಥಯಾತ್ರೆಗೆ ವಿಜೃಂಭಣೆಯ ಸ್ವಾಗತ ಕೋರಲಾಗುವುದು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕನ್ನಡಪರ ಸಂಘ ಸಂಸ್ಥೆಗಳು ಕೂಡ ರಥಯಾತ್ರೆಯಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಜುಲೈ 9ರಂದು ಹೊಳಲ್ಕೆರೆ ತಾಲ್ಲೂಕಿಗೆ ಪ್ರವೇಶಿಸುವ ಕರ್ನಾಟಕ ಜ್ಯೋತಿ ರಥಯಾತ್ರೆಯು ಅಂದು ತಾಲ್ಲೂಕಿನಾದ್ಯಂತ ಸಂಚರಿಸಲಿದೆ. ಅದೇ ರೀತಿ ರಥಯಾತ್ರೆಯು ಜುಲೈ 10ರಂದು ಚಿತ್ರದುರ್ಗ, ಜುಲೈ 11ರಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ, ಜುಲೈ 12ರಂದು ಚಳ್ಳಕೆರೆ, ಜುಲೈ 13ರಂದು ಹಿರಿಯೂರು, ಜುಲೈ 14ರಂದು ಹೊಸದುರ್ಗ ತಾಲ್ಲೂಕಿನಲ್ಲಿ ಸಂಚರಿಸಲಿದೆ.
ರಥಯಾತ್ರೆಯು ತಾಲ್ಲೂಕು ಕೇಂದ್ರದಿಂದ ಬೆಳಿಗ್ಗೆ 9ಕ್ಕೆ ಪ್ರಾರಂಭಿಸಿ, ಮುಂದಿನ ತಾಲ್ಲೂಕು ತಲುಪುವ ಮಾರ್ಗಮಧ್ಯದಲ್ಲಿ ಬರುವ ಗ್ರಾಮಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಯಾ ಗ್ರಾಮಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳು, ರಥಯಾತ್ರೆ ಜಿಲ್ಲೆಯಲ್ಲಿ ಸಂಚರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಜ್ಯೋತಿ ರಥಯಾತ್ರೆ ಸಂಚರಿಸುವ ಮಾರ್ಗಗಳಲ್ಲಿ ಸಂಬಂಧಪಟ್ಟ ಠಾಣಾಧಿಕಾರಿಗಳು ಸೂಕ್ತ ಭದ್ರತೆಯನ್ನು ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಥವು ಜಿಲ್ಲೆಯಾದ್ಯಂತ ಸರಾಗವಾಗಿ ಸಂಚರಿಸುವ ವ್ಯವಸ್ಥೆಗಳ ಮೇಲುಸ್ತುವಾರಿ ನೋಡಿಕೊಳ್ಳುವಂತೆ ಉಪವಿಭಾಗಾಧಿಕಾರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಆಹಾರ ಇಲಾಖೆ ಸಹಾಯಕ ನಿರ್ದೇಶಕರು ಕ್ರಮವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ರು ಜನಪ್ರತಿನಿಧಿಗಳನ್ನು ಆಹ್ವಾನಿಸಿ ಹಾಗೂ ತಮ್ಮ ತಾಲ್ಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಕನ್ನಡಪರ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ “ಕರ್ನಾಟಕ ಸಂಭ್ರಮ5-50” ರ ಅಂಗವಾಗಿ ಸಂಚರಿಸುತ್ತಿರುವ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿಕೊಂಡು, ತಾಲ್ಲೂಕು ಕೇಂದ್ರದಿಂದ ಪ್ರಾರಂಭಿಸಿ, ಮುಂದಿನ ತಾಲ್ಲೂಕು ತಲುಪುವ ಮಾರ್ಗಮಧ್ಯದಲ್ಲಿ ಬರುವ ಗ್ರಾಮಗಳಲ್ಲಿ ರಥವು ಸಂಚರಿಸಲು ಎಲ್ಲ ಸೂಕ್ತ ವ್ಯವಸ್ಥೆಗಳನ್ನು ನಿರ್ವಹಿಸುವಂತೆ ಹಾಗೂ ರಥದೊಂದಿಗೆ ಬರುವ ಅಧಿಕಾರಿ, ಸಿಬ್ಬಂದಿಗಳ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಜುಲೈ 10ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಕನ್ನಡ ಭಾವುಟಗಳು ಹಾಗೂ ಕೆಂಪು-ಹಳದಿ ಶಾಲುಗಳ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶರು ಹಾಗೂ ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಲಾಗಿದೆ.
ರಥವನ್ನು ಸ್ವಾಗತಿಸುವ ಹಾಗೂ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ತಮ್ಮಗೆ ವಹಿಸಿರುವ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.