ದಿನಾಂಕ:05/07/2024 ರಂದು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ಕೈಗೊಳ್ಳಲಾಯಿತು.
ಸದರಿ ತಪಾಸಣೆ ವೇಳೆಯಲ್ಲಿ 04 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು,
ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಲಾಯಿತು.
ಅಲ್ಲದೇ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.
ಅಲ್ಲದೇ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೊಂಡ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹಾಗೂ
ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡಬೇಕೆಂದು ಅಧಿಕಾರಿಗಳು ಸೂಚಿಸಿದರು.
ಸದರಿ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕಿ ಅಂಬಿಕಾ ವೈ, ಶಿಕ್ಷಣ ಇಲಾಖೆಯ ಬಿ ಆರ್ ಸಿ ನಾಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯ ವಾಣಿಯ ಮಲ್ಲಿಕಾರ್ಜುನ ಮತ್ತು ಲಾವಣ್ಯ ಹಾಜರಿದ್ದರು.