ವಿಜಯನಗರವಾಣಿ ಸುದ್ದಿ ಜಿಲ್ಲಾಧಿಕಾರಿಗಳು ಎಂದರೆ ಮಹಾರಾಜರಲ್ಲ, ಮಹಾರಾಜರು ಎನ್ನುವ ಮನೋಭಾವ ಬಿಟ್ಟು ಬಿಡಿ. ಈ ರೀತಿಯ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಸಿದ್ದರಾಮಯ್ಯಅಧಿಕಾರಿಗಳಿಗೆ ಚಾಟಿ ಬೀಸಿದರು. ಜನಸಾಮಾನ್ಯರ ಕೆಲಸದಲ್ಲಿ ಉದಾಸೀನ, ನಿರ್ಲಕ್ಷ್ಯವನ್ನು ನಾನು ಸಹಿಸಲ್ಲ, ಸರಿಯಾಗಿ ಕೆಲಸ ಮಾಡದ
ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇನೆ ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಲಸ ಮಾಡದ ಅಧಿಕಾರಿಗಳನ್ನು ತಮ್ಮದೇ ಆದ ದಾಟಿಯಲ್ಲಿ
ತರಾಟೆಗೆ ತೆಗೆದುಕೊಂಡು ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಗುಡುಗಿದರು.ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರು ಜನಸೇವಕರು ಎಂಬುದನ್ನು ನೆನಪಿನಲ್ಲಿಟ್ಟುಕೊಂಡುಜನಸೇವೆ ಮಾಡಬೇಕು ಎಂದು ಹೇಳಿದ
ಅವರು, ಜಿಲ್ಲಾಧಿಕಾರಿಗಳಿಗೆ ಮಹಾರಾಜರುಎನ್ನುವ ಭಾವನೆ ಇದ್ದರೆ, ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ ಎಂದರು.ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನಸಾಮಾನ್ಯರಿಗೆ ತಲುಪಲು ಅಧಿಕಾರಿಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಜನಕಲ್ಯಾಣ ಸಾಧ್ಯ ಎಂದು ಹೇಳಿದರು. ಜನಸಂಪರ್ಕ, ಜನಸ್ಪಂದನ ಸಭೆಯಲ್ಲಿ 15 ರಿಂದ 20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸ್ಥಳೀಯವಾಗಿ ಸರಿಯಾಗಿ ಕೆಲಸ
ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿ ಅಹವಾಲು ಹೊತ್ತು ಬರಲು ಸಾಧ್ಯ ಇರಲಿಲ್ಲ. ನೀವುಗಳು ಸರಿಯಾಗಿ ಕೆಲಸ ಮಾಡಿ, ಅರ್ಜಿಗಳನ್ನು ಫಾರ್ವಡ್್ರ ಮಾಡಿ ಕೈ ತೊಳೆದುಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸಲು
ನಿಮ್ಮ ಕೈಯಲ್ಲಿ ಸಾಧ್ಯವಿಲ್ಲ ಎಂದರೆ ನೀವು ಅಧಿಕಾರಿಗಳಾಗಿ ಏಕೆ ಇರಬೇಕು. ಅರ್ಜಿಗಳನ್ನು ಫಾರ್ವಡ್್ರ ಮಾಡಲು ನಿಮ್ಮ ಅಗತ್ಯ ಇದೆಯೇ ಎಂದು ಅವರು ಖಾರವಾಗಿ ಪ್ರಶ್ನಿಸಿದರು.ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌ಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ಭೇಟಿ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಲವೆಡೆ ನಾನು ಕೊಟ್ಟಿರುವ ಸೂಚನೆಗಳನ್ನು ಸರಿಯಾಗಿ ಅಧಿಕಾರಿಗಳು ಪಾಲಿಸುತ್ತಿಲ್ಲ. ಪಿಡಿಓಗಳು, ಗ್ರಾಮ, ಆಡಳಿತಾಧಿಕಾರಿಗಳು, ತಾವುಕೆಲಸ ಮಾಡುವ ಜಾಗದಲ್ಲೇ ವಾಸ್ತವ್ಯ ಇರಬೇಕು. ಈ ಬಗ್ಗೆ ಗಮನ ಹರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದೆ. ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದೆ. ತಕ್ಷಣವೇ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ, ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಬರಬೇಕು. ಇಲ್ಲದಿದ್ದರೆ ನಿಮ್ಮನ್ನೇ ಜವಾಬ್ದಾರರನ್ನಾಗಿ ಮಾಡುತ್ತೇನೆ ಎಂದು ಖಡಕ್ ಆಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಡೆಂಗ್ಯೂ ನಿಯಂತ್ರಣಕ್ಕೆ ಏನೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೋ ಅವುಗಳನ್ನೆಲ್ಲ ಕೈಗೊಳ್ಳಿ, ಹಾಗೆಯೇ ಡೆಂಗ್ಯೂ ಜ್ವರ ಪೀಡಿತರಿಗೆ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆಗೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.ಡೆಂಗ್ಯೂ ನಿಯಂತ್ರಣಕ್ಕೆ ಸಮಾರೋಪಾದಿಯಲ್ಲಿ ಕೆಲಸ ಮಾಡಿ, ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿ ಡೆಂಗ್ಯೂ ನಿಯಂತ್ರಣಕ್ಕೆ ಮುಂದಾಗಿ ಎಂದು ಕರೆ ನೀಡಿದರು.