ಬಳ್ಳಾರಿ,ಜು.23
ಬಾಲ್ಯ ವಿವಾಹ ಹಾಗೂ ಪೋಕ್ಸೊ ಪ್ರಕರಣಗಳ ಕುರಿತು ಶಾಲಾ–ಕಾಲೇಜುಗಳಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ರೀಡ್ಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೋಲಿಸ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಪೋಕ್ಸೋ ಕಾಯ್ದೆ-2012”, “ಬಾಲ್ಯವಿವಾಹ ನಿಷೇಧ ಕಾಯ್ದೆ-2006” ಕುರಿತು ಸೇವಾನಿರತ ಪೋಲಿಸ್ ಅಧಿಕಾರಿಗಳು ಹಾಗೂ ಮಕ್ಕಳ ಕಲ್ಯಾಣ ಪೋಲಿಸ್ ಅಧಿಕಾರಿಗಳು ಹಾಗೂ ತನಿಖಾ ಸಹಾಯಕ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಬಾಲ್ಯ ವಿವಾಹ ಪ್ರಕರಣ ಹೆಚ್ಚಾಗುತ್ತಿದ್ದು, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರು ಸಿಐಡಿ ಕಚೇರಿಯ ಎಸ್.ಜೆ.ಪಿ.ಯು ಘಟಕದ ಪೋಲಿಸ್ ತರಬೇತುದಾರರಾದ ಸಿ.ಜೆ.ರೋಹಿತ್ ಅವರು ಪೋಲಿಸ್ ಇಲಾಖೆ ಹಾಗೂ ಇತರೆ ಮಕ್ಕಳ ರಕ್ಷಣಾ ಇಲಾಖೆಗಳ ಭಾಗೀದಾರರಿಗೆ ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಎಎಸ್ಪಿಗಳಾದ ರವಿಕುಮಾರ್ ಕೆ.ಪಿ., ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ, ಡಿಎಸ್ಪಿ ಹಾಗೂ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಚಂದ್ರಕಾಂತ ನಂದಾರೆಡ್ಡಿ, ರೀಡ್ಸ್ ಸಂಸ್ಥೆಯ ತಿಪ್ಪೇಶಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಪೋಲಿಸ್ ಇನ್ಸ್ಪೆಕ್ಟರ್, ಪಿಎಸ್ಐ, ಎಸ್.ಜೆ.ಪಿ.ಯು ನ ಅಧಿಕಾರಿ ಹಾಗೂ ಸಿಬ್ಬಂದಿಯವರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯವರು ಇದ್ದರು.