ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ “ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ ಏಜೆನ್ಸೀ ವತಿಯಿಂದ 28,840 ಉದ್ಯೋಗಗಳಿಗೆ ಬೇಡಿಕೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 120 ಕ್ಕೂ ಅಧಿಕ ನಿಯೋಜಕರು/ಕಂಪನಿಗಳು ಹಾಗೂ 15,000 ಉದ್ಯೋಗಾಂಕ್ಷಿಗಳ ಭಾಗವಹಿಸುವ ಗುರಿ ಹೊಂದಲಾಗಿದೆ. ಇದುವರೆಗೂ ನೇರ ಸಂದರ್ಶನ ಮೂಲಕ ಆಯ್ಕೆಗೆ ಅಂದಾಜು 8,000 ಉದ್ಯೋಗ ಬೇಡಿಕೆ ಇದೆ ಹಾಗೂ ಏಜೆನ್ಸೀ ಮೂಲಕ ಆಯ್ಕೆಗೆ 20,000 ಉದ್ಯೋಗಕ್ಕೆ ಬೇಡಿಕೆ ಇದೆ ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿಗೆ 100 ಉದ್ಯೋಗಾಂಕ್ಷಿಗಳು ನೋಂದಣಿ ಹಾಗೂ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಗಳಲ್ಲಿ 2000 ದಿಂದ 3000 ಉದ್ಯೋಗಾಂಕ್ಷಿಗಳು ನೋಂದಣಿ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಆನ್ಲೈನ್ ನಲ್ಲಿ ನೋಂದಾಯಿಸಿಕೊಳ್ಳದ ಉದ್ಯೋಗಾಂಕ್ಷಿಗಳಿಗೆ ಸ್ಥಳದಲ್ಲಿಯೇ ನೋಂದಣಿ ವ್ಯವಸ್ಥೆ ಕಲ್ಪಿಸಿ, ಉದ್ಯೋಗಾಂಕ್ಷಿಗಳ ವಿದ್ಯಾಬ್ಯಾಸಕ್ಕೆ ಅನುಗುಣವಾಗಿ ಕಂಪನಿಗಳ ಬಳಿ ಸಂದರ್ಶನಕ್ಕೆ ತೆರಳಲು ಮಾರ್ಗದರ್ಶನ ಮಾಡಲು ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ನೇಮಿಸಿ. ಉದ್ಯೋಗಾಂಕ್ಷಿಗಳಿಗೆ ನೆರವಾಗಲು ಕಂಪನಿ ವಿವರಗಳು, ಸಂದರ್ಶನಕ್ಕೆ ಹಾಜರಾಗಿ ಬೇಕಾದ ವಿಳಾಸದ ಸೂಚನಾ ಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.
ಉದ್ಯೋಗಮೇಳದಲ್ಲಿ ಭಾಗವಹಿಸಲು ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿಕೊಳ್ಳಬಹುದಾಗಿರುತ್ತದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಪಿ.ಡಿ.ಒ ಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಹೇಳಲಾಗಿದೆ. ಉದ್ಯೋಗಾಂಕ್ಷಿಗಳು ಕೂಡ ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು ಉದ್ಯೋಗಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಮರೇಶ್.ಹೆಚ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.