ಕೇಂದ್ರ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಬಳ್ಳಾರಿ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಧಾಕರ್.ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಆದರ್ಶ ಜೀವನ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಶರ್ಮ ಅವರು ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ದೇಹಕ್ಕೆ ಅತ್ಯಂತ ತೀವ್ರವಾದ ಅಡ್ಡ ಪರಿಣಾಮ ಬೀರುತ್ತಿದ್ದು, ಹೆಚ್ಚಾಗಿ ಆರೋಗ್ಯದ ಅಪಾಯಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಅವರು ತಿಳಿಸಿದರು.
ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ.ಬಸವರಾಜ.ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮಾದಕ ವಸ್ತುಗಳಿಂದ ದೂರವಿದ್ದು, ಸದೃಢ ಆರೋಗ್ಯ ಹೊಂದಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ನೆಹರು ಯುವಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್, ನಿವೃತ್ತ ಸೈನಿಕರಾದ ಈಶ್ವರ್, ಉಪನ್ಯಾಸಕರಾದ ಡಾ.ಸೋಮಶೇಖರ.ಎಂ., ದೈಹಿಕ ಶಿಕ್ಷಕ ಮತ್ತೇಗೌಡ, ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.