ಧಾರವಾಡ ಡಿಸೆಂಬರ 07: ಡಿಸೆಂಬರ 9 ರಂದು ಹಮ್ಮಿಕೊಂಡಿರುವ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನು ಜರುಗಿಸಲಾಯಿತು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸುಜಾತಾ.ವಿ.ಹಸವೀಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಜಿಲ್ಲೆಯ 1 ರಿಂದ 19 ವರ್ಷದ ಒಳಗಿನ 5,80,127 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಗುರಿಯನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಸಹಯೋಗದೊಂದಿಗೆ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗುವುದು ಎಂದು ತಿಳಿಸಿದರು.
ಜಂತುಹುಳು ಭಾದೆಯಿಂದ ಮಕ್ಕಳಲ್ಲಿ ರಕ್ತಹೀನತೆ, ಏಕಾಗ್ರತೆ ಕೊರತೆ ಮತ್ತು ಬೆಳವಣಿಗೆ ಕುಂಠಿತವಾಗುವುದನ್ನು ಜಂತುಹುಳು ನಿವಾರಣಾ ಮಾತ್ರೆ ನೀಡುವುದರ ಮೂಲಕ ತಡೆಗಟ್ಟಬಹುದು ಎಂದು ಅವರು ತಿಳಿಸಿದರು.
ಡಿಸೆಂಬರ್ 9, 2024 ರಂದು ಜಂತುಹುಳು ನಿವಾರಣಾ ಮಾತ್ರೆ ಅಲ್ಬೆಂಡಜೋಲ್ನ್ನು ಉಚಿತವಾಗಿ 1 ರಿಂದ 19 ರ ವಯೋಮಾನದ ಮಕ್ಕಳಿಗೆ ನೀಡಲಾಗುವುದು. ಡಿಸೆಂಬರ್ 9 ರಂದು ಬಿಟ್ಟು ಹೋದ ಮಕ್ಕಳಿಗೆ ಡಿಸೆಂಬರ್ 16 ರಂದು ಮಾತ್ರೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆ ಅಧಿಕಾರಿಗಳು, ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು, ಉಪ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.