ದಾವಣಗೆರೆ ಡಿಸೆಂಬರ್ 13 ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ ನೊಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.
ನೋಂದಣಿ ಕೇಂದ್ರಗಳು ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ದಾವಣಗೆರೆ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹೊನ್ನಾಳ್ಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಜಗಳೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಹರಿಹರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣ, ಚನ್ನಗಿರಿ ಇಲ್ಲಿ ಕೃಷಿ ಇಲಾಖೆಯವರು ಸಿದ್ಧಪಡಿಸಿದ ಫ್ರೂಟ್ ತಂತ್ರಾÂಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೊಂದಣಿ ಮಾಡಿಕೊಳ್ಳಲು ತಿಳಿಸಿದೆ. ನೊಂದಣಿ ಆರಂಭವಾಗಿದ್ದು 2025 ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುವುದು.
ರೈತರು ಕೃಷಿ ಇಲಾಖೆ ನೀಡಿರುವ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ ಫೂಟ್ ನೊಂದಣಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ ಸಾಧನದ ಮುಖಾಂತರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಫೂಟ್ಸ್ ದತ್ತಾಂಶದಲ್ಲಿ ರೈತರು ನೀಡಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ನೇರವಾಗಿ ರೈತರ ಖಾತೆಗೆ ಹಣ ಸಂದಾಯ ಮಾಡಲಾಗುವುದು. ಆದ್ದರಿಂದ ರೈತರು ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರುವುದನ್ನು ಮತ್ತು ಎನ್ಪಿಸಿಎಲ್ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಖರೀದಿ ಕೇಂದ್ರಕ್ಕೆ ಆಧಾರ್ ಕಾರ್ಡ್, ಪಹಣಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ನೀಡಬೇಕು.
ರೈತರು ತಾವು ನೀಡುವ ಎಲ್ಲಾ ದಾಖಲಾತಿಗಳಲ್ಲಿಯೂ ಒಂದೇ ಹೆಸರು ನಮೂದಾಗಿರತಕ್ಕದ್ದು, ಮತ್ತು ರಾಗಿ ತಂದು ಖರೀದಿ ಕೇಂದ್ರದಲ್ಲಿ ರಾಶಿ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸಲು ನೇಮಿಸಲ್ಪಟ್ಟ ಗ್ರೇಡರ್ಸ್ ದಾಸ್ತಾನಿನ ಗುಣಮಟ್ಟವನ್ನು ಪರಿಶೀಲಿಸಿ ಉತ್ತಮ ಗುಣಮಟ್ಟವೆಂದು ಧೃಢಪಟ್ಟರೆ ಮಾತ್ರ ಖರೀದಿಸಲಾಗುವುದು. ಗುಣಮಟ್ಟ ಸರಿಯಿಲ್ಲವೆಂದು ದೃಢಪಡಿಸಿದ್ದಲ್ಲಿ ರೈತರು ತಮ್ಮ ಸ್ವಂತ ಖರ್ಚಿನಿಂದ ಹಿಂದಕ್ಕೆ ತೆಗೆದುಕೊಂಡು ಹೋಗಬೇಕು.
ಪ್ರತಿ ರೈತರಿಂದ ಪ್ರತಿ ಎಕರೆಗೆ ರಾಗಿ 10.00 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮತ್ತು ರೈತರಿಂದ ಭತ್ತವನ್ನು ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಖರೀದಿಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ತಹಶೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ), ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂರವಾಣಿ ಸಂಖ್ಯೆ -08192-296770 ಗೆ ಕರೆಮಾಡಬಹುದು ಎಂದು ಅವರು ತಿಳಿಸಿದ್ದಾರೆ.