ಧಾರವಾಡ ಮಾರ್ಚ 20: ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಇಂದು (ಮಾ.20) ಬೆಳಿಗ್ಗೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು, ಬೇಸಿಗೆ ಕಾಲದಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಹಾಗೂ ಮೇವಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಕುರಿತು ಸಭೆ ಜರುಗಿಸಿದರು.
ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಕ್ರಮವಹಿಸಲು ಧಾರವಾಡ ಗ್ರಾ.ಕು.ನೀ ಮತ್ತು ನೈ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಜಗದೀಶ ಪಾಟೀಲ ಅವರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಇರುವ 146 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಡಿ ಬರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವ ಕುರಿತಂತೆ ಎಲ್ಲ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಸಮಸ್ಯಾತ್ಮಕ ಗ್ರಾಮಗಳಲ್ಲಿ ಅವಶ್ಯಕತೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಬಾಡಿಗೆ ಅಧಾರದ ಮೇಲೆ ಖಾಸಗಿ ಬೋರವೆಲ್ ಮೂಲಕ ನೀರು ಪಡೆದು ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅವರು ತಿಳಿಸಿದರು.
ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕ್ರಮವಹಿಸುವ ಬಗ್ಗೆ ಪಶುಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿ, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಅಗತ್ಯ ಮೇವು ದಾಸ್ತಾನು ಶೇಖರಿಸಿ, ಅಗತ್ಯವಿರುವ ಗ್ರಾಮಗಳಿಗೆ ಸರಬರಾಜು ಮಾಡಲು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ತಾಲೂಕು ಪಂಚಾಯತ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರರು, ಪಶುಪಾಲನೆ ಗಾಗೂ ಪಶು ವೈದ್ಯಕೀಯ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.