Ad image

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Vijayanagara Vani
ಕೊಪ್ಪಳ ಜುಲೈ 14 : 2025-26 ನೇ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೃಷಿ ಪಂಡಿತ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು.
ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್‌ಐಡಿಯನ್ನು ಬಳಸಿಕೊಂಡು K-Kisan Portal ರಡಿ Citizen Login ಅಥವಾ RSK Login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ಆಗಸ್ಟ್ 30 ರೊಳಗೆ ಅರ್ಜಿ ಸಲ್ಲಿಸಬೇಕು.
ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ ಅಥವಾ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆಯನ್ನು ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ ಅಥವಾ ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೆ ಅವರ ಸಂಶೋಧನೆಗಳು ಅಥವಾ ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.
ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ ಅಥವಾ ವಿಶ್ವವಿದ್ಯಾಲಯ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಆದರೆ ಕೃಷಿ ಮತ್ತು ಕೃಷಿ ಸಂಬಂಧಿತವಾದ ಜಲಾನಯನ ಅಭಿವೃದ್ದಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆ ಅಥವಾ ವಿಶ್ವವಿದ್ಯಾಲಯ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ, ನಿವೃತ್ತರಾದ ನೌಕರರು ಮತ್ತು ಅವರ ಕುಟುಂಬ ವರ್ಗದವರನ್ನು ಹೊರತುಪಡಿಸಿ ಈ ಇಲಾಖೆಗಳಲ್ಲಿನ ನಿವೃತ್ತ ತಾಂತ್ರಿಕೇತರ ನೌಕರರು ಮತ್ತು ಈ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ನಿವೃತ್ತ ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸಬಹುದಾಗಿದೆ.
ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರು ಈ ಕಾರ್ಯಕ್ರಮದಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಕೃಷಿ ಪಂಡಿತ ಸ್ಪರ್ಧೆಯ ಮಾನದಂಡಗಳು, ಬಹುಮಾನದ ಮೊತ್ತ ಮುಂತಾದ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";