ಚಿತ್ರದುರ್ಗಫೆ.21:
ಚಿತ್ರದುರ್ಗ ತಾಲ್ಲೂಕಿನ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಈಚೆಗೆ ಗೊಲ್ಲರಹಟ್ಟಿಗಳ ಮೌಢ್ಯತೆ ಕುರಿತು ಜಾಗೃತಿ ಮೂಡಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮೇಲ್ವಿಚಾರಕಿ ದೇವಿಕಾ ಅವರು, ಮೌಢ್ಯತೆ ಕುರಿತು ತಾಯಂದಿರಿಗೆ ಹಾಗೂ ಮಕ್ಕಳಿಗೆ ತಿಳುವಳಿಕೆ ನೀಡಿದರು. ಜೊತೆಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.
ಜೆಂಡರ್ಸ್ ಸ್ಪೆಷಲಿಸ್ಟ್ ಡಿ.ಗೀತಾ ಮಾತನಾಡಿ, ಮೌಢ್ಯಾಚರಣೆ ತುಂಬಾ ಅನಿಷ್ಠ ಪದ್ಧತಿಯಾಗಿದ್ದು, ಈ ತರಹದ ಅನಿಷ್ಠ ಪದ್ಧತಿಗಳನ್ನು ಆಚರಣೆ ಮಾಡದಂತೆ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಿದರು. ಇಂತಹ ಪದ್ಧತಿಗಳನ್ನು ಆಚರಣೆ ಮಾಡಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಮತ್ತು ತುರ್ತು ಸಹಾಯವಾಣಿ ಸಂಖ್ಯೆ 112ಗೆ ಕರೆ ಮಾಡುವಂತೆ ಮಕ್ಕಳಿಗೆ ತಿಳಿಸಿದರು.
ಶಿಕ್ಷಣಕ್ಕೆ ಹೆಚ್ಚಿನ ಒಲವು ನೀಡಿ, ಸಮಾಜಕ್ಕೆ ಮಾದರಿ ಮಕ್ಕಳು ಆಗಬೇಕು. ಶಾಲೆಯ ಮಕ್ಕಳಿಗೆ ಮೌಢ್ಯ ಪದ್ಧತಿ ಮತ್ತು ಆಚರಣೆ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಧಾರಾಣಿ, ಎಸ್ಡಿಎಂಸಿ ಅಧ್ಯಕ್ಷೆ ಮಮತಾ, ಹಿರೇಕಬ್ಬಿಗೆರೆ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಡಿ.ಮಂಜಣ್ಣ ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮಕ್ಕಳು ಇದ್ದರು.