Ad image

ಆಸ್ತಿ ತೆರಿಗೆ ವಿನಾಯಿತಿ ಪ್ರತಿಯೊಬ್ಬರೂ ಲಾಭ ಪಡೆಯಿರಿ; ನ್ಯಾ.ಸಿದ್ದರಾಮಪ್ಪ

Vijayanagara Vani
ಆಸ್ತಿ ತೆರಿಗೆ ವಿನಾಯಿತಿ ಪ್ರತಿಯೊಬ್ಬರೂ ಲಾಭ ಪಡೆಯಿರಿ; ನ್ಯಾ.ಸಿದ್ದರಾಮಪ್ಪ
ರಾಯಚೂರು,- ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತಿಯನ್ನು ಇದೇ 2024ರ ಜು.31ರ ಅಂತ್ಯದವರೆಗೆ ವಿಸ್ತರಿಸಿದ್ದು, ಜಿಲ್ಲೆಯ ಪ್ರತಿಯೊಬ್ಬರೂ ಇದರ ಲಾಭವನ್ನು ಪಡೆಯಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹೇಳಿದರು.
ಅವರು ಜು.06ರ ಶನಿವಾರ ದಂದು ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಲಾಗಿರುವ ಶೇ.5%ರ ರಿಯಾಯಿತಿ ಅವಧಿಯನ್ನು ಸರ್ಕಾರ ವಿಸ್ತರಿಸಿರುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ ಮೊದಲ 30 ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪಾವತಿಸಿದ್ದಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ವಿನಾಯಿತಿಯನ್ನು ಈ ತಿಂಗಳ ಅಂತ್ಯದವರೆಗೆ ನೀಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಆಸ್ತಿ ತೆರಿಗೆ ಪಾವತಿದಾರರು ಈ ರಿಯಾಯಿತಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಪ್ರಸಕ್ತ ಆರ್ಥಿಕ ವರ್ಷದ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿದ್ದ, ಶೇ.5ರಷ್ಟು ರಿಯಾಯಿತಿಯನ್ನು ಜುಲೈ 31ರ ವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮನವಿಯಂತೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ0ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ 2024ರ ಜುಲೈ 13ರಂದು ಜಿಲ್ಲಾದ್ಯಂತ ಬಹೃತ್ ಲೋಕ್ ಅದಾಲತ್ ಆಯೋಜಿಸಲಾಗಿದೆ. ಇದರಲ್ಲಿ ನೂರಾರು ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದ್ದು, ಲೋಕ್ ಅದಾಲತಿನ ಉದ್ದೇಶವನ್ನು ಪ್ರತಿಯೊಬ್ಬರು ಸದುಪಯೋಗ ಪಡೆಯಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ನಗರಸಭೆಯ ಆಯುಕ್ತ ಗುರುಸಿದ್ದಯ್ಯ ಹಿರೇಮಠ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್ ಸೇರಿದಂತೆ ಸಿಂಧನೂರು ನಗರಸಭೆ, ಮಾನ್ವಿ, ದೇವದುರ್ಗ, ಲಿಂಗಸೂಗೂರಿನ ಪುರಸಭೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Share This Article
error: Content is protected !!
";