ಬಳ್ಳಾರಿ,ಆ.26
ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡದೇ, ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕೋರಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಭೌತಿಕ ಹಾಗೂ ರಾಸಾಯನಿಕ ಗುಣ ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೂ ಅಪಾಯವಾಗುವುದಲ್ಲದೇ ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು.
*ಅನುಸರಿಸಬೇಕಾದ ಕ್ರಮ:*
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33 (ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
ತೈಲ ಬಣ್ಣಗಳು ಅಪಾಯಕಾರಿ ರಾಸಾಯನಿಕಗಳಿಂದ ಕೂಡಿದ್ದು, ಹಾಗಾಗಿ ಜೇಡಿ ಮಣ್ಣಿನಿಂದ ಮಾಡಿದ ಹಾಗೂ ನೈಸರ್ಗಿಕ ಬಣ್ಣಗಳಿಂದ ಮಾಡಿಸುವ ಗಣೇಶ ಮೂರ್ತಿಗಳನ್ನು ಪೂಜಿಸಬೇಕು. ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿದ ನಂತರ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು.
ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ, ನಗರಸಭೆ ಹಾಗೂ ಪುರಸಭೆಯ ಕಸ ಸಂಗ್ರಹಣ ವಾಹನಗಳಿಗೆ ನೀಡಬೇಕು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು.
ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು-2000 ರನ್ವಯ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ಧ್ವನಿವರ್ಧಕ, ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ಬಳಸಲು ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಹಾಗಾಗಿ ಸಾರ್ವಜನಿಕರು ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.