ಕೊಪ್ಪಳ ಮಾರ್ಚ್ 21 : ಬೇಸಿಗೆ ಆರಂಭವಾಗಿರುವುದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಶುಕ್ರವಾರ ಕನಕಗಿರಿ ತಾಲೂಕಿನ ಹಿರೇಖೇಡಾ, ಮುಸಲಾಪುರ, ಚಿಕ್ಕಖೇಡಾ, ರಾಂಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಗ್ರಾಮಗಳ ಬೋರವೆಲಗಳ ಪರಿಶೀಲನೆ ನಡೆಸಿದ ಅವರು ಬೇಸಿಗೆ ಹಿನ್ನೆಲೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಕ್ರಮವಹಿಸಬೇಕು. ಆಯಾ ಗ್ರಾಮ ಪಂಚಾಯತಿ ಪಿಡಿಓಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸರಿಯಾಗಿ ಕುಡಿಯುವ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಇದೇ ವೇಳೆ ಮುಸಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪುರ ಕೆರೆಗೆ ಭೇಟಿ ನೀಡಿ ಕೆರೆಯು ಸಂಪೂರ್ಣ ಭತ್ತಿರುವುದನ್ನು ಕಂಡು, ಕೆರೆಗೆ ನೀರು ತುಂಬಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಕೆರೆಗೆ ನೀರು ತುಂಬಿಸಲು ಹೇಳಿದರು.
ಈ ಸಂದರ್ಭದಲ್ಲಿ ಕನಕಗಿರಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ದೇವಣ್ಣ ಕಟ್ಟಿ. ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಯು. ಮಲ್ಲಿಕಾರ್ಜುನ್. ನಾಗೇಶ ಎಚ್. ಸೇರಿದಂತೆ ಇತರರು ಉಪಸ್ಥಿತರಿದ್ದರು.