ಮಂಡ್ಯ ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ವಿಷಯಾಧರಿತ ಸೈಕ್ಲಾಥಾನ್ ಕಾರ್ಯಕ್ರಮವನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಛೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ತಾಲ್ಲೂಕಿನಲ್ಲಿ ಸೈಕ್ಲಾಥಾನ್ ನಲ್ಲಿ ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮ, ಬಾಲ್ಯ ವಿವಾಹದ ದುಷ್ಪರಿಣಾಮಗಳು, ಮಹಿಳೆಯರು ಖುತುಚಕ್ರದಲ್ಲಿ ವಹಿಸಬೇಕಾದ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ, ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳಾ ಪತ್ರ, ಸಾಧನೆಯ ಉತ್ತುಂಗದಲ್ಲಿರುವ ಮಹಿಳೆಯರು ಸೇರಿದಂತೆ ವಿವಿಧ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.
*ಏಪ್ರಿಲ್ 4 ರೊಳಗಾಗಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ಆಯೋಜಿಸಿ* ತಾಲ್ಲೂಕು ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿ, ಹಗ್ಗ ಜಗ್ಗಾಟ, ರಂಗೋಲಿ, ತರಕಾರಿ ಕೆತ್ತನೆ, ಚರ್ಚಾ ಸ್ಪರ್ಧೆ, ಆಶು ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಏಪ್ರಿಲ್ 7 ಅಥವಾ 8 ರಂದು ಆಯೋಜಿಸಿ ಎಂದರು.
ಆರೋಗ್ಯ ಇಲಾಖೆ ವತಿಯಿಂದ ತಾಲ್ಲೂಕು ವಾರು ವಿಚಾರಸಂಕಿರಣ ಕಾರ್ಯಕ್ರಮವನ್ನು ಆಯೋಜಿಸುವುದರೊಂದಿಗೆ ಜಿಲ್ಲಾ ಮಟ್ಟದಲ್ಲಿ ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮ ಕುರಿತು ನಾಟಕ ವನ್ನು ಅಯೋಜಿಸುವಂತೆ ತಿಳಿಸಿದರು.
ಎನ್ ಆರ್ ಎಲ್ ಎಂ ಯೋಜನೆಯಡಿ ಕಸ ವಿಲೇವಾರಿ ವಾಹನ ಚಲಾಯಿಸುವ ಮಹಿಳಾ ಅಟೋ ಡ್ರೈವರ್, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ, ಪಶು ಸಖಿ, ವಾಟರ್ ವುಮೆನ್, ಕೃಷಿ ಸಖಿ ವಿಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿರುವ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಚಂದ್ರು, ಬಾಬು, ಯೋಜನಾ ನಿರ್ದೇಶಕ ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಧುಶ್ರೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.