ಶಿವಮೊಗ್ಗ : ಡಿಸೆಂಬರ್ 06 :: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 150 ಹುದ್ದೆಗಳ ನೇವiಕಾತಿಗಾಗಿ ಡಿಸೆಂಬರ್ 07 ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಡಿಸೆಂಬರ್ 08ರಂದು 41 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವಸಿದ್ಧತೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2ದಿನಗಳ ಕಾಲ ನಡೆಯಲಿರುವ ಈ ಪರೀಕ್ಷೆಯಲ್ಲಿ ಯಾವುದೇ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಅವರು ಪರೀಕ್ಷೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲುಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಮಾರ್ಗಾಧಿಕಾರಿಗಳಾಗಿ ಹಾಗೂ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ ಎಂದರು.
ಡಿಸೆಂಬರ್ 07ರಂದು ಮಧ್ಯಾಹ್ನ 2ರಿಂದ 4ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಡಿಸೆಂಬರ್ 08ರಂದು ಬೆಳಿಗ್ಗೆ 10ರಿಂದ 11.30ರವರೆಗಿನ ಮೊದಲ ಅಧಿವೇಶನದಲ್ಲಿ ಸಾಮಾನ್ಯ ಜ್ಞಾನ ಮತ್ತು ಮಧ್ಯಾಹ್ನ 2ರಿಂದ 4ರವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ ಮತ್ತು ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ ಎಂದರು.
ಪರೀಕ್ಷೆಗಳು ಶಾಂತಯುತವಾಗಿ ನಡೆಸಲು ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಪೊಲೀಸ್ ಸಿಬ್ಬಂಧಿಗಳನ್ನು ನಿಯೋಜಿಸಲು ಸೂಚಿಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ಪ್ರತಿ ಕೊಠಡಿಯಲ್ಲಿ ಶುದ್ಧ ಗಾಳಿ, ಬೆಳಕು ಇರುವಂತೆ ಹಾಗೂ ಗೋಡೆ ಗಡಿಯಾರ ಇರುವಂತೆ ನೋಡಿಕೊಳ್ಳಲು ಮತ್ತು ಜಾಮರ್‌ಗಳನ್ನು ಅಳವಡಿಸಲು ಮೇಲ್ವಿಚಾರಕರಿಗೆ ಸೂಚಿಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗಳಿಗೆ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದರು.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮುನ್ನ ಸ್ಮಾರ್ಟ್ವಾಚ್, ವಿದ್ಯುತ್ ಉಪಕರಣಗಳು, ಕ್ಯಾಲ್ಯೂಕಲೇಟರ್, ಮೊಬೈಲ್ ಫೋನ್ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು ತಮ್ಮ ಗುರುತಿನ ಚೀಟಿ, ಕುಡಿಯುವ ನೀರಿನ ಬಾಟಲ್‌ಗಳಲ್ಲದೆ ಇತರೆ ವಸ್ತುಗಳು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಲ್ಲದೇ ಮಹಿಳೆಯರು ಮಾಂಗಲ್ಯಸರ ಮತ್ತು ಕಾಲುಂಗುರು ಹೊರತುಪಡಿಸಿ, ಇತರೆ ಆಭರಣಗಳ ಧರಿಸುವುದನ್ನು ನಿಷೇಧಿಸಿದೆ. ಪುರುಷರು ಫುಲ್‌ಷರ್ಟ್. ಫ್ಯಾನ್ಸಿ ಪ್ಯಾಂಟ್, ಶೂ-ಸಾಕ್ಸ್ಗಳನ್ನು ಧರಿಸಿ ಬರುವುದನ್ನು ನಿಷೇಧಿಸಲಾಗಿದೆ ಎಂದರು.
ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಟೈಪಿಂಗ್, ಫ್ಯಾಕ್ಸ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಕೇಂದ್ರದೊಳಗೆ ಪರೀಕ್ಷಾರ್ಥಿಗಳಲ್ಲದೇ ಇತರೆ ವ್ಯಕ್ತಿಗಳು ಪ್ರವೇಶಿಸುವುದನ್ನು, ಗುಂಪುಗೂಡುವುದನ್ನು ನಿಷೇಧಿಸಿರುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಕ.ಲೋ.ಸೇ.ಆಯೋಗದ ನೋಡಲ್ ಅಧಿಕಾರಿ ಶ್ರೀಮತಿ ರೂಪಾ ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು, ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.