ಬಳ್ಳಾರಿ,ಮಾ.03
ಕರ್ನಾಟಕ ಸರ್ಕಾರವು ವೈದ್ಯರ ಸೇವೆ ಗೌರವಿಸುವ ಜೊತೆಗೆ ಸಮುದಾಯದಲ್ಲಿ ಸ್ವಾಸ್ತö್ಯ ಕಾಪಾಡುವ ಬೆಂಬಲವಾಗಿ ಬಿಜಾಪುರದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 31ನೇ ರಾಜ್ಯ ಸಮ್ಮೇಳನದಲ್ಲಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ ಅವರಿಗೆ “ವೈದ್ಯ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳಾಗಿ, ತಾಲ್ಲೂಕ ಆರೋಗ್ಯ ಅಧಿಕಾರಿಗಳಾಗಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ಪ್ರಸ್ತುತ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ “ವೈದ್ಯ ಶ್ರೀ” ಪ್ರಶಸ್ತಿಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ‘ಆರೋಗ್ಯ ಸೇವೆ ಗಗನ ಕುಸುಮವಾಗಿರುವ ಈ ದಿನಗಳಲ್ಲಿ ಬಡವರು ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿದ್ದಾರೆ. ಹಾಗಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಜವಾಬ್ದಾರಿ ಹೆಚ್ಚಿದ್ದು, ಜನತೆಗೆ ಗುಣಮಟ್ಟದ ಸೇವೆ ನೀಡಬೇಕು. ಇದಕ್ಕಾಗಿ ಸರ್ಕಾರ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು’ ಎಂಬ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ದಿ ಸಚಿವ ಎಮ್.ಬಿ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್, ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಎಸ್ ಪಾಟೀಲ್ ಅವರುಗಳು ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.