Ad image

ಕೆಎಂಇಆರ್‍ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಸೂಚನೆ…ಗಣಿಬಾಧಿತ ಪ್ರದೇಶ ಜನರ ಕೇಂದ್ರೀಕರಿಸಿ ಪರಿಹಾರ ಕ್ರಮ ಕೈಗೊಳ್ಳಿ

Vijayanagara Vani
ಕೆಎಂಇಆರ್‍ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಸೂಚನೆ…ಗಣಿಬಾಧಿತ ಪ್ರದೇಶ ಜನರ ಕೇಂದ್ರೀಕರಿಸಿ ಪರಿಹಾರ ಕ್ರಮ ಕೈಗೊಳ್ಳಿ
ಚಿತ್ರದುರ್ಗ ಫೆ.12:
ಜಿಲ್ಲೆಯ ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರನ್ನು ಕೇಂದ್ರೀಕರಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ (ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆ) ಸಿಇಪಿಎಂಐಝಡ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಿರುವ ಕಾಮಗಾರಿ, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣಿಬಾಧಿತ ಪ್ರದೇಶಗಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಜನರಿಗಾಗಿ ಕೆಎಂಇಆರ್ಸಿ ಅಡಿಯಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಗಣಿಗಾರಿಕೆ ಪ್ರಭಾವಕ್ಕೆ ಒಳಗಾದ ಗಣಿಬಾಧಿತ ಪ್ರದೇಶಗಳನ್ನು ಗುರುತಿಸಿ, ಅಂತಹ ಪ್ರದೇಶಗಳ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಮೂಲಕ ಪರಿಹಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಗಣಿಬಾಧಿತ ಪ್ರದೇಶಗಳ ವ್ಯಾಪ್ತಿಯ ಜನರ ಜೀವನೋಪಾಯಕ್ಕಾಗಿ ಯಾವ ರೀತಿಯ ಸುಧಾರಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾವನೆ ಸಲ್ಲಿಸಬೇಕು. ಪ್ರಸ್ತಾವನೆ ಅನುಮೋದನೆ ನಂತರ ವಿಸ್ತøತ ಯೋಜನಾ ವರದಿ ತಯಾರಿಸಬೇಕು. ಯಾವುದೇ ಪ್ರಸ್ತಾವನೆ ಸಲ್ಲಿಸುವ ಮುಂಚಿತವಾಗಿ ತಾವುಗಳ ಕೈಗೊಂಡಿರುವ ಕಾಮಗಾರಿಗಳು ಯಾವ ಕಾರಣಕ್ಕಾಗಿ ಅವಶ್ಯಕತೆ ಇದೆ? ಕಾಮಗಾರಿಗಳು, ಯೋಜನೆಗಳು ಗಣಿಬಾಧಿತ ಪ್ರದೇಶಗಳ ಜನರಿಗೆ ಯಾವ ರೀತಿಯ ಲಾಭವಾಗಲಿದೆ ಎಂಬ ಇತ್ಯಾದಿ ಅಂಶಗಳ ಮಾಹಿತಿ ಒಳಗೊಂಡಿರಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವತಿಯಿಂದ ರೆಗ್ಯುಲರ್ ಬಜೆಟ್ನಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೂ ಹಾಗೂ ಕೆಎಂಇಆರ್ಸಿ ಅಡಿಯಲ್ಲಿ ತೆಗೆದುಕೊಳ್ಳುವ ಕಾಮಗಾರಿಗಳಿಗೂ ವ್ಯತ್ಯಾಸ ಇದೆ. ರೆಗ್ಯುಲರ್ ಬಜೆಟ್ನಲ್ಲಿ ಪ್ರಸಕ್ತ ವರ್ಷಕ್ಕೆ ಅನುಗುಣವಾಗಿ ನಮ್ಮ ಯೋಜನೆ ತಯಾರಿ ಮಾಡಿಕೊಂಡು ಅನುಷ್ಠಾನ ಮಾಡುತ್ತೇವೆ. ಆದರೆ ಕೆಎಂಇಆರ್ಸಿ ಒಂದು ಯೋಜನೆಯಾಗಿದ್ದು, ಹಲವು ವರ್ಷಗಳಿಗೆ ಒಂದೇ ಯೋಜನೆ ರೂಪಿಸಲಾಗುವುದು ಎಂದರು.
ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿ:
 ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯಡಿ ನಿಯಮಾನುಸಾರ ಗಣಿಬಾಧಿತ ಪ್ರದೇಶಗಳ ಅರ್ಹರನ್ನು ಗುರುತಿಸಿ ನಿವೇಶನ, ವಸತಿ ಸೇರಿದಂತೆ ಇತ್ಯಾದಿ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಈ ಯೋಜನೆಗೆ ಅರ್ಹರಲ್ಲದ ಫಲಾನುಭವಿಗಳನ್ನು ಆಯ್ಕೆ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೆಎಂಇಆರ್ಸಿ ಅಡಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳಿಗೆ ಶೀಘ್ರವಾಗಿ ಟೆಂಡರ್ ಕರೆದು, ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ದಾಖಲೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನೆ, ರೇಷ್ಮೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

Share This Article
error: Content is protected !!
";