ಚಿತ್ರದುರ್ಗಜುಲೈ12:
ವಸತಿ ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ ಗ್ರಾಮದ ಮೊರಾರ್ಜಿ ವಸತಿ ಶಾಲೆಗೆ ಶುಕ್ರವಾರ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ವಸತಿ ಶಾಲೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಮಕ್ಕಳ ಊಟೋಪಚಾರದ ಬಗ್ಗೆ ರುಚಿ ಮತ್ತು ಶುಚಿ ಎರಡು ಇರುವಂತೆ ನೋಡಿಕೊಳ್ಳಬೇಕು ಹಾಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ನೋಡಿಕೊಳ್ಳಿ, ಹಾಗೆಯೇ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವಿರಲಿ ಎಂದು ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಮತ್ತು ನಿಲಯ ಪಾಲಕರಿಗೆ ಕಿವಿಮಾತು ಹೇಳಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಯೋಗಾಲಯ ಮತ್ತು ಗಣಿತಾಲಯ ಕೊಠಡಿಗೆ ತೆರಳಿ, ಮಕ್ಕಳು ಈ ಪ್ರಯೋಗಾಲಯದಲ್ಲಿ ಮತ್ತು ಗಣಿತ ಕಲಿಕೆಯ ಬಗ್ಗೆ ವಿವರವಾಗಿ ಶಿಕ್ಷಕರರೊಂದಿಗೆ ಸಂವಾದ ನೆಡೆಸಿದರು. ನಂತರ ಮಕ್ಕಳು ಹಾಜರಾತಿ, ಇತರೇ ದಾಖಲೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ವಸತಿ ಶಾಲೆಯ ಪ್ರಾಂಶುಪಾಲರಾದ ಕೆ.ಬಿ ರಘುನಾಥ್, ಶ್ರೀನಿವಾಸ ಗೌಡ, ಮಲ್ಲೇಶ್ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.