Ad image

ನಗರದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ : ಗುರುದತ್ತ ಹೆಗಡೆ

Vijayanagara Vani
ನಗರದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ : ಗುರುದತ್ತ ಹೆಗಡೆ
ಶಿವಮೊಗ್ಗ, ಜುಲೈ 05  ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ, ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನದಟ್ಟಣೆಯ ಹಾಗೂ ಸಮಸ್ಯಾತ್ಮಕ ಸ್ಥಳಗಳನ್ನು ಗುರುತಿಸಿ, ಆದ್ಯತೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಮತ್ತು ಅಭಿವೃದ್ಧಿಯ ಕುರಿತು ಸಕಾಲಿಕವಾಗಿ ಕ್ರಮ ಕೈಗೊಳ್ಳುವಂತೆ ಹಾಗೂ ರಸ್ತೆ ದುರಸ್ತಿ ಅಥವಾ ನೂತನ ರಸ್ತೆ ನಿರ್ಮಾಣದಂತಹ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಂದರ್ಭಗಳಲ್ಲಿ ಸಂಬಂಧಿಸಿದ ಪ್ರಾಧಿಕಾರಿಗಳ ಗಮನಕ್ಕೆ ತರುವಂತೆ ಅವರು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ಪ್ರತಿ 2ತಿಂಗಳಿಗೊಮ್ಮೆ ರಸ್ತೆ ಸುರಕ್ಷತಾ ಸಮಿತಿ ಸಭೆ ಸೇರಿ ಈ ಹಿಂದಿನ ಸಭೆಗಳಲ್ಲಿ ಚರ್ಚಿಸಿದ ವಿಷಯಗಳ ಮೇಲೆ ಕೈಗೊಂಡ ಕ್ರಮಗಳು, ಸಮಸ್ಯೆಗಳ ಪರಿಹಾರ ಕ್ರಮಗಳು, ಹೊಸದಾಗಿ ಗುರುತಿಸಲಾದ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ವಿಸ್ತøತವಾಗಿ ಚರ್ಚಿಸಿ ಕ್ರಮ ವಹಿಸಬಹುದಾಗಿದೆ. ಅಲ್ಲದೆ ಜಿಲ್ಲೆಯಲ್ಲಿನ ಎಲ್ಲಾ ರಸ್ತೆ ಸಂಬಂಧಿತ ಸಮಸ್ಯೆಗಳಿಗೆ ಹಂತಹಂತವಾಗಿ ಅಲ್ಪ ಕಾಲದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ. ಆದ್ದರಿಂದ ಅಧಿಕಾರಿಗಳು ಸಕಾಲಿಕವಾಗಿ ತುರ್ತು ಅಗತ್ಯ ಕ್ರಮಗಳನ್ನು ಕೈಗೊಂಡು ವರದಿ ನೀಡುವಂತ ಅವರು ಸೂಚಿಸಿದರು.
ಜಿಲ್ಲೆಯ ಲೋಕೋಪಯೋಗಿ ಇಲಾಖೆ ರಸ್ತೆಗಳಲ್ಲಿರುವ ಸುಮಾರು 51ಕಪ್ಪುಸ್ಥಳಗಳನ್ನು ಈಗಾಗಲೇ ಪೊಲೀಸ್ ಇಲಾಖೆಯವರು ಗುರುತಿಸಿದ್ದಾರೆ. ಸಾರಿಗೆ ಇಲಾಖೆ, ಲೋಕೋಪಯೋಗಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ಕ್ರಮಕ್ಕಾಗಿ ವರದಿ ನೀಡುವಂತೆ ಹಣಕಾಸಿನ ಅಗತ್ಯವಿದ್ದಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಸಲಹೆ ನೀಡಿದರು.
ನಗರದ ಉಷಾನರ್ಸಿಂಗ್ ಹೋಂ ಸರ್ಕಲ್ನಲ್ಲಿ ಆಕಸ್ಮಿಕ ಅಪಘಾತಗಳು ಹೆಚ್ಚುತ್ತಿದ್ದು, ಅದರ ನಿಯಂತ್ರಣಕ್ಕಾಗಿ ರೈಲ್ವೇ ಇಲಾಖೆ ವತಿಯಿಂದ ಸಿಗ್ನಲ್ ಅಳವಡಿಸಲು ಈಗಾಗಲೇ ಸೂಚಿಸಲಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದವರು ನುಡಿದರು.
ಅಲ್ಲದೇ ಆಕಸ್ಮಿಕ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ಕ್ರಿಯಾಯೋಜನೆ ತಯಾರಿಸುವಂತೆ ಸೂಚಿಸಿದ ಅವರು, ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ರಸ್ತೆಗಳ ದುರಸ್ತಿ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ರಸ್ತೆ ನಿಯಮಗಳ ಉಲ್ಲಂಘನೆ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ವಿಧಿಸಿದ ದಂಡ ಪಾವತಿಸಲು ಕ್ಯೂಆರ್ ಕೋಡ್ ಹಾಗೂ ಫೋನ್ಪೇ ನಂತಹ ಆಧುನಿಕ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಸಂಚಾರಿ ನಿಯಂತ್ರಕ ಅಧಿಕಾರಿಗಳಿಗೆ ಸೂಚಿಸಿದ ಅವರು, ವಾಸಸ್ಥಳಗಳಲ್ಲಿ ವಾಹನಗಳ ಕರ್ಕಶ ಶಬ್ಧ ನಿಯಂತ್ರಣಕ್ಕೆ ವಿಶೇಷ ಗಮನಹರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ಕುಮಾರ್ ಭೂಮರೆಡ್ಡಿ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಶಂಕರಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ವೈ.ಎನ್. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
error: Content is protected !!
";