Ad image

ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾದಕ ವಸ್ತುಗಳ ನಿಯಂತ್ರಣಕ್ಕೆ ವಿವಿಧ ಇಲಾಖಾ ಅಧಿಕಾರಿಗಳ ತಂಡ ರಚನೆ

Vijayanagara Vani
ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾದಕ ವಸ್ತುಗಳ ನಿಯಂತ್ರಣಕ್ಕೆ ವಿವಿಧ ಇಲಾಖಾ ಅಧಿಕಾರಿಗಳ ತಂಡ ರಚನೆ
ಚಿತ್ರದುರ್ಗ
ಮಾದಕ ವಸ್ತುಗಳ ನಿಯಂತ್ರಣ ದಿಸೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಅಧಿಕಾರಿಗಳ ತಂಡ ರಚಿಸಿ, ನಿಯಮಿತವಾಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಾದಕ ವಸ್ತುಗಳ ನಿಯಂತ್ರಣ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
ಮಾದಕ ವಸ್ತುಗಳ ನಿಯಂತ್ರಣ ಕುರಿತಂತೆ ಪೊಲೀಸ್ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಸ್ಟೆಲ್, ಕಾಲೇಜು ಕ್ಯಾಂಪಸ್ ಮಾತ್ರವಲ್ಲದೇ ಕಾಲೇಜು ಕ್ಯಾಂಪಸ್ ಹೊರಗಡೆಯೂ ಪೆಟ್ಟಿಗೆ ಅಂಗಡಿ ಸೇರಿದಂತೆ ಕೆಲವು ನಿರ್ಧಿಷ್ಟ ಸ್ಥಳಗಳ ಅಡ್ಡಗಳ ಮೇಲೆಯೂ ತೀವ್ರ ನಿಗಾ ವಹಿಸಬೇಕು. ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕುವಾರು ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿ ಆಗಿಂದಾಗೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಯುವ ಜನರು ಮಾದಕ ವಸ್ತುಗಳ ಬಳಕೆಯ ಬಲೆಗೆ ಬೀಳದಂತೆ ಎಚ್ಚರ ವಹಿಸುವುದು ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳು ಕೂಡ ಆಂತರಿಕವಾಗಿ ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸುವಂತಹ ವ್ಯವಸ್ಥೆಯನ್ನು ಮಾಡಿಕೊಂಡು, ಮಾದಕ ವಸ್ತುಗಳ ಚಟುವಟಿಕೆ ಬೆಳವಣಿಗೆಗೆ ಅವಕಾಶ ನೀಡದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಲಾಗಿದೆ. ಈ ಕುರಿತು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಎನ್ಎಸ್ಎಸ್ ಜಿಲ್ಲಾ ಬೋಧಕ ಲೋಕೇಶ್ ಮಾತನಾಡಿ, ಎನ್ಎಸ್ಎಸ್ ವಾರ್ಷಿಕ ಶಿಬಿರಗಳಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಉಪನ್ಯಾಸ, ಜಾಗೃತಿ ಜಾಥಾಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಎನ್ಎಸ್ಎಸ್ ತಂಡಗಳು ಹಾಗೂ ಸ್ವಯಂ ಸೇವಕರ ತಂಡವು ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮಾತನಾಡಿ, ಮಾದಕ ವಸ್ತುಗಳ ಬಳಕೆ ಸಂಬಂಧಪಟ್ಟಂತೆ ಹೊಳಲ್ಕೆರೆ ಹಾಗೂ ಚಿತ್ರದುರ್ಗ ತಾಲ್ಲೂಕುಗಳಿಂದ ಸಾಕಷ್ಟು ದೂರುಗಳು ಬರುತ್ತಿವೆ. ದುಡ್ಡಿಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಪೆಡ್ಲರ್ ಕುರಿತು ಸ್ಥಳೀಯರು, ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಅಥವಾ ಸಾರ್ವಜನಿಕರು ಮಾಹಿತಿ ನೀಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಭರತ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತಂತೆ ವಿದ್ಯಾರ್ಥಿಗಳಲ್ಲಿ ಈಗಾಗಲೆ ಜಾಗೃತಿ, ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಲ್ಲದೆ ನಿಯಮಿತವಾಗಿ ಕಣ್ಗಾವಲು ವಹಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share This Article
error: Content is protected !!
";