ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಆ.20ರಂದು ಡಿ.ದೇವರಾಜ ಅರಸು ಜನ್ಮ ದಿನ: ವಿಜೃಂಭಣೆಯ ಆಚರಣೆ

Vijayanagara Vani
ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ   ಆ.20ರಂದು ಡಿ.ದೇವರಾಜ ಅರಸು ಜನ್ಮ ದಿನ: ವಿಜೃಂಭಣೆಯ ಆಚರಣೆ
ಚಿತ್ರದುರ್ಗ
ಹಿಂದುಳಿದ ವರ್ಗಗಳ ಆಶಾಕಿರಣ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿ. ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಯ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ: ಡಿ.ದೇವರಾಜ ಅರಸು ರವರ ದೂರದೃಷ್ಠಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ನಾವು ಸ್ಮರಿಸಬೇಕಿದೆ. ಈ ಹಿನ್ನಲೆಯಲ್ಲಿ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಜಯಂತಿಯನ್ನು ಆಚರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಡಿ.ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆಯ ಅಂಗವಾಗಿ ಆಗಸ್ಟ್ 20ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲ ಬಳಿಯಿಂದ ವಿವಿಧ ಕಲಾತಂಡಗಳೊಂದಿಗೆ ಡಿ.ದೇವರಾಜು ಅರಸು ಅವರ ಭಾವಚಿತ್ರದೊಂದಿಗೆ ನಗರದ ತರಾಸು ರಂಗಮಂದಿರದವರೆಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು. ನಂತರ ಬೆಳಿಗ್ಗೆ 11ಕ್ಕೆ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಜಯಂತಿ ಅಂಗವಾಗಿ ಡಿ.ದೇವರಾಜು ಅರಸು ಅವರ ಜೀವನ ಸಾಧನೆ, ವ್ಯಕ್ತಿತ್ವ, ಕೊಡುಗೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಜತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಎಂದು ತಿಳಿಸಿದ ಅವರು, ತಾಲ್ಲೂಕು ಮಟ್ಟದಲ್ಲಿಯೂ ಸಹ ಅರ್ಥಪೂರ್ಣವಾಗಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಆಚರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುಬ್ರಾನಾಯ್ಕ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ದಿ.ಡಿ.ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆಯ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿದರು.
WhatsApp Group Join Now
Telegram Group Join Now
Share This Article
error: Content is protected !!