ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಲೆದಾಡಿ ಪರಿಹಾರ ಸಿಗದೇ, ತ್ವರಿತ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರ್ಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಅಹವಾಲುಗಳಿದ್ದಲ್ಲಿ ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿನ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಜನತಾ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಆಲಿಸಿ, ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಸಮಸ್ಯೆಗಳಿರುವ ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಕೂಲಂಕುಶವಾಗಿ ಪರಿಶೀಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಡನೆ ಚರ್ಚಿಸಿ, ತ್ವರಿತವಾಗಿ ಪರಿಹಾರ ನೀಡಲಾಗುವುದು ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಉತ್ಸುಕರಾಗಿಯೇ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ ಪರಿಹಾರ ನೀಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
*ಒಟ್ಟು 27 ಅರ್ಜಿ ಸಲ್ಲಿಕೆ:*
ನೂತನ ಜಿಲ್ಲಾಡಳಿತ ಭವನದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಒಟ್ಟು 27 ಅರ್ಜಿಗಳು ಸ್ವೀಕೃತಗೊಂಡವು.
ಕಂದಾಯ ಇಲಾಖೆ 17, ಭೂ ಮಾಪನ ಇಲಾಖೆ 03, ಬಳ್ಳಾರಿ ಮಹಾನಗರ ಪಾಲಿಕೆ 02, ಜಿಲ್ಲಾ ಪಂಚಾಯತಿ 03, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಉಪವಿಭಾಗ 01, ತಾಲ್ಲೂಕು ಪಂಚಾಯಿತಿ 01 ಸೇರಿದಂತೆ ಒಟ್ಟು 27 ಅರ್ಜಿ ಸ್ವೀಕಾರಗೊಂಡವು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಉಪವಿಭಾಗಾಧಿಕಾರಿ ಹೇಮಂತ್, ಎಎಸ್ಪಿ ನವೀನ್ ಕುಮಾರ್, ತಹಶೀಲ್ದಾರ ಗುರುರಾಜ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.