Ad image

ಜು.13 ರಂದು ಲೋಕ್ ಅದಾಲತ್ *ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ.ಮಂಜುನಾಥ ನಾಯಕ್*

Vijayanagara Vani
ಜು.13 ರಂದು ಲೋಕ್ ಅದಾಲತ್ *ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ : ನ್ಯಾ.ಮಂಜುನಾಥ ನಾಯಕ್*
ಶಿವಮೊಗ್ಗ 
ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ‘ಲೋಕ್ ಅದಾಲತ್’ ಕಾರ್ಯಕ್ರಮ ಜುಲೈ 13 ರ ಶನಿವಾರದಂದು ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಮನವಿ ಮಾಡಿದರು.
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜು.10 ರಂದು ‘ಲೋಕ ಅದಾಲತ್’ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಜು.13 ರಂದು ಜಿಲ್ಲೆಯಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದರು.
ಈ ಲೋಕ್ ಅದಾಲತ್ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ವಿನೀತ ಶರ್ಮ ವಿರುದ್ಧ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ ದಿನಾಂಕ 11.08.2020 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮ ಪಾಲಿಗೆ ಸಂಬಂಧಿಸಿದ್ದು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು.
ಇದೂ ಅಲ್ಲದೇ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು. ಅಂತಹ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ(ತೀರ್ಪು) ಇದ್ದಂತೆ. ಇಂತಹ ಅವಾರ್ಡ್ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆಯ ಉಪಯೋಗವನ್ನು ಪಡೆಯಬೇಕೆಂದು ಈ ಮೂಲಕ ಕರೆ ಕೊಡುತ್ತೇನೆ.
ದಿನಾಂಕ 01.07.2024 ರವರೆಗೆ ನಮ್ಮ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿನ ಬಾಕಿ ಇರುವ ಪ್ರಕರಣಗಳ ಒಟ್ಟು ಸಂಖ್ಯೆ 55112 ಇದ್ದು, ಅವುಗಳ ಪೈಕಿ ದಿನಾಂಕ 06.07.2024 ರವರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ವತಿಯಿಂದ ಒಟ್ಟು 14926 ಪ್ರಕರಣಗಳನ್ನು ದಿನಾಂಕ 13.07.2024 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ಗಾಗಿ ಗುರುತಿಸಲಾಗಿರುತ್ತದೆ ಹಾಗೂ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಆ ಪ್ರಕರಣಗಳನ್ನು ರಾಜೀಸಂಧಾನಕ್ಕಾಗಿ ಚಾಲ್ತಿಯಲ್ಲಿರುತ್ತದೆ. ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
ದಿ: 16-03-2024 ರಂದು ನಡೆದ ಲೋಕ್ ಅದಾಲತ್ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರುಗಳು, ನ್ಯಾಯವಾದಿಗಳು, ವಿಮೆ ಕಂಪನಿಯ ಅಧಿಕಾರಿಗಳು, ಪ್ಯಾನಲ್ ವಕೀಲರುಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರದಿಂದ 14669 ಪ್ರಕರಣಗಳನ್ನು ಗುರುತಿಸಲಾಗಿದ್ದು, ಅವುಗಳ ಪೈಕಿ 10815 ವಿಲೇವಾರಿಗೊಂಡಿರುತ್ತವೆ. ಈ ಬಾರಿ 12 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕಾಲಕಾಲಕ್ಕೆ ಕಾನೂನು ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಿ ಎಲ್ಲಾ ವರ್ಗದ ಜನರಿಗೆ ಸಂಬಂಧಪಟ್ಟಂತಹ ಕಾನೂನುಗಳ ಅರಿವು ಮೂಡಿಸುವುದು ಮತ್ತು ಅವಶ್ಯಕ ವ್ಯಕ್ತಿಗಳಿಗೆ ನೆರವನ್ನು ಸಹ ಕೊಡುವಂತಹ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿದೆ.
ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ : 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಜು.31 ರವರೆಗೆ ಶೇ.5 ರಿಯಾಯಿತಿಯನ್ನು ವಿಸ್ತರಿಸಲಾಗಿದ್ದು ಆಸ್ತಿ ಪಾವತಿದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದರು.
ಅಪೌಷ್ಟಿಕ ನಿವಾರಣೆಗೆ ಪ್ರಯತ್ನ : ಉಚ್ಚ ನ್ಯಾಯಾಲದ ನಿರ್ದೇಶನದಂತೆ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯಾದ್ಯಂತ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಅಪೌಷ್ಟಿಕತೆ ಮತ್ತು ಅಲ್ಲಿನ ಕುಂದುಕೊರತೆ ನಿವಾರಿಸಲು ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಂಗನವಾಡಿಗಳಿಗೆ ಭೇಟಿ ನೀಡಿ ಸ್ಥಿತಿಗತಿ ಬಗ್ಗೆ ವರದಿ ನೀಡಲು ಸೂಚಿಸಿರುತ್ತಾರೆ. ಅದರಂತೆ ಜಿಲ್ಲೆಯಲ್ಲಿ ಸದಸ್ಯ ಕಾರ್ಯದರ್ಶಿಗಳು 8 ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿದ ವೇಳೆ ಹಲವು ಕುಂದುಕೊರತೆ ಕಂಡು ಬಂದಿದ್ದು, ಸಮಿತಿಗೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯ ಅಂಗನವಾಡಿಯಲ್ಲಿನ ಕುಂದು ಕೊರತೆ ನಿವಾರಿಸಿ ಅಭಿವೃದ್ದಿ ಪಡಿಸಲು ಪ್ರಯತ್ನಿಸಲಾಗುತ್ತಿದ್ದು, ಎಲ್ಲರೂ ಸಹಕರಿಸಬೇಕೆಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಕುಮಾರ್ ಪಾಲ್ಗೊಂಡಿದ್ದರು.

Share This Article
error: Content is protected !!
";