ಬಳ್ಳಾರಿ,ಆ.21
ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಕುರುಗೋಡು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ‘ಜಾಬ್ ಕಾರ್ಡ್ ಮೇಳ’ವನ್ನು ಆಯೋಜಿಸಲು ಕುರುಗೋಡು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕುರುಗೋಡು ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಓರ್ವಾಯಿ ಹಾಗೂ ಯರಂಗಳಿಗಿ ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಜಾಬ್ ಕಾರ್ಡ್ ನೀಡುವ ಅಭಿಯಾನ ಯಶಸ್ವಿಯಾಗಿ ಪ್ರಾರಂಭವಾಗಿದೆ. ಇದೇ ಮಾದರಿಯಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲೂ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಲು ಮೇಳ ಹಮ್ಮಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಪ್ರಸಕ್ತ ಸಾಲಿನ ಉದ್ಯೋಗ ಖಾತರಿ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಯನ್ನು ವಿಳಂಬ ಮಾಡದೆ ಸಲ್ಲಿಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸಹಾಯಕ ನಿರ್ದೇಶಕರಾದ (ನರೇಗಾ) ಶಿವರಾಮರೆಡ್ಡಿ.ಪಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ರೇಣುಕಾಚಾರ್ಯ ಸ್ವಾಮಿ, ತಾಲ್ಲೂಕು ಪಂಚಾಯತ್ ಯೋಜನಾಧಿಕಾರಿ ರಾಧಿಕಾ, ತಾಲ್ಲೂಕಿನ ಎಲ್ಲಾ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.
====
