ಚಿತ್ರದುರ್ಗಜುಲೈ.19:
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ. ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟಲು ವಿಫಲವಾಗುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕೆಲಸ ಮಾಡುತ್ತಾರೆ. ಇವರಿಗೆ ಬಾಲ್ಯ ವಿವಾಹದ ಬಗ್ಗೆ ಖಚಿತ ಮಾಹಿತಿ ಇರುತ್ತದೆ, ಆದರೂ ಜಾಣ ಕುರುಡುತನ ಪ್ರದರ್ಶಿಸುತ್ತಾರೆ. ಮೇಲ್ಮಟ್ಟದ ಅಧಿಕಾರಿಗಳು ಸಹ ಮೌನ ವಹಿಸುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಸಿಬ್ಬಂದಿಯ ನಿರ್ಲಿಪ್ತತೆ ಹಾಗೂ ಮೌನ, ಒಂದು ರೀತಿಯಲ್ಲಿ ಬಾಲ್ಯ ವಿವಾಹಕ್ಕೆ ಸಹಕಾರ ನೀಡಿದಂತೆ ಭಾಸವಾಗುತ್ತದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಂದಾಯ ಇಲಾಖೆಯಿಂದ ಬಾಲ್ಯ ವಿವಾಹ ತಡೆಗಟ್ಟಲು ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗುವುದು. ಒಂದು ವೇಳೆ ಈ ತಂಡಗಳು ನೇರವಾಗಿ ಕಾರ್ಯಚಾರಣೆ ನಡೆಸಿ ಬಾಲ್ಯ ವಿವಾಹ ನಡೆಯುವುದನ್ನು ಪತ್ತೆ ಹಚ್ಚಿ, ಬಾಲ್ಯ ವಿವಾಹ ತಡೆದರೆ, ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮೇಲ್ವಿಚಾರಕರು ಹಾಗೂ ಸಿಡಿಪಿಓಗಳನ್ನು ಅಮಾನತು ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.
ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಜೂನ್ ಅಂತ್ಯಕ್ಕೆ ಒಟ್ಟು 67 ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ದೂರುಗಳು ದಾಖಲಾಗಿದ್ದವು. ಈ ಪೈಕಿ 36 ಪಕರಣಗಳನ್ನು ತಡೆಗಟ್ಟಲಾಗಿದೆ. ಬಾಲ್ಯ ವಿವಾಹ ನಡೆದ 31 ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬಾಲ್ಯ ವಿವಾಹ ತಡೆಗಟ್ಟಲು ಕಾರ್ಯ ಯೋಜನೆ ರೂಪಿಸಲಾಗಿದ್ದು, ಶಾಲಾ ಶಿಕ್ಷಕರು, ಮುಖ್ಯೋಪಧ್ಯಾಯರಿಗೆ ತರಬೇತಿ ನೀಡಲಾಗಿದೆ. ಸಿಡಿಪಿಓ ಹಾಗೂ ಮೇಲ್ವಚಾರಕರು ಸಹ ಖುದ್ದು ಕಾಳಜಿ ವಹಿಸಿ ಬಾಲ್ಯ ವಿವಾಹಗಳನ್ನು ತಡೆಗಟ್ಟುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸಭೆಗೆ ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿಯೂ ಅಪ್ರಾಪ್ತ ಗರ್ಭಿಣಿ ಪತ್ತೆಗೆ ಸೂಚನೆ :
ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ತಾಯಿ ಕಾರ್ಡು ನೀಡುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಜನ್ಮ ದಿನಾಂಕವನ್ನು ಪರಿಶೀಲನೆ ಮಾಡಲಾಗುತ್ತಿದೆ. 18 ವರ್ಷಕ್ಕಿಂತ ಕಡಿಮೆ ಇರುವ ಬಾಲಕಿ ಗರ್ಭ ಧರಿಸಿದ ಪ್ರಕರಣ ಕಂಡು ಬಂದ ತಕ್ಷಣವೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಭಾರತಿ ಬಣಕಾರ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಾಗ ಜನ್ಮ ದಿನಾಂಕವನ್ನು ಧೃಡೀಕರಿಸಿಕೊಳ್ಳಬೇಕು. ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು ಪತ್ತೆಯಾದ ಕೂಡಲೇ ವರದಿ ಮಾಡುವಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿ ಪತ್ರ ಬರೆಯುವಂತೆ ಸೂಚಿಸಿದರು.
ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ :
ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಅಂಗನವಾಡಿಗಳನ್ನು ನಡೆಸಬಾರದು. ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಅಂಗನವಾಡಿಗಳ ಸ್ಥಿತಿಗತಿ ಪರಿಶೀಲಿಸಿ ವರದಿ ಸಲ್ಲಿಸಲು ಉಪವಿಭಾಗಧಿಕಾರಿಗಳು ಹಾಗೂ ತಹಶೀಲ್ದಾರ್ಗಳಿಗೆ ಸೂಚನೆ ನೀಡಲಾಗಿದೆ. ನಿವೇಶನ ಲಭ್ಯವಿರುವ ಸ್ಥಳಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕುರಿತು ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸಬೇಕು. ಅಂಗನವಾಡಿ ಸ್ಥಿತಿಗತಿಗಳ ಕುರಿತು ಪ್ರತ್ಯೇಕವಾಗಿ ಸಭೆ ಕರೆಯವಂತೆ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 20 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಸಹಾಯಕಿಯರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಹೇಳಿದರು.
ಸಭೆಯಲ್ಲಿ ಪೋಷಣ್ ಅಭಿಯಾನ್, ಮಿಷನ್ ಶಕ್ತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಸೇರಿದಂತೆ ಇತರೆ ಯೋಜನೆಗಳ ಕುರಿತು ಪರಿಶೀಲನೆ ನಡೆಸಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್.ಎಸ್.ಕೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.