ಚಿತ್ರದುರ್ಗ ಜು. 12
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾಗಿರುವ “ಶಕ್ತಿ” ಯೋಜನೆಯನ್ನು ಜಾರಿಗೊಳಿಸಿ 2 ವರ್ಷಗಳು ಪೂರ್ಣಗೊಂಡಿದ್ದು, 500 ಕೋಟಿಗೂ ಹೆಚ್ಚು ಮಹಿಳೆಯರು ರಾಜ್ಯದ ಸರ್ಕಾರಿ ಸ್ವಾಮ್ಯದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜು. 14 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲ್ಲೂಕು ಬಸ್ ನಿಲ್ದಾಣಗಳಲ್ಲಿ ಸಿಹಿ ವಿತರಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಪೈಕಿ “ಶಕ್ತಿ” ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದ 2023 ರ ಜೂನ್ 11 ರಿಂದ ಜಾರಿಗೊಳಿಸಿದ್ದು, ರಾಜ್ಯದ ಎಲ್ಲ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ ಫಲಾನುಭವಿಗಳ ಸಂಖ್ಯೆ 500 ಕೊಟಿ ಗಡಿ ದಾಟಿದ್ದು, ಇದು ಸಂಭ್ರಮದ ಸಂಗತಿಯಾಗಿದೆ. ಈ ಸಂಭ್ರಮವನ್ನು ಸಾಂಕೇತಿಕವಾಗಿ ಜು. 14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿನ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ, ಬಸ್ಸಿಗೆ ಪೂಜೆ ಸಲ್ಲಿಸಿ, ಸಾರಿಗೆ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ಸಿಹಿ ತಿನಿಸಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಸಚಿವರು, ಶಾಸಕರುಗಳು ಸೇರಿದಂತೆ ಎಲ್ಲ ಗಣ್ಯಮಾನ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಉನ್ನತ ಅಧಿಕಾರಿಗಳು, ಸಾರಿಗೆ ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಳ್ಳುವರು ಎಂದು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.