Ad image

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನಿರ್ದೇಶನ ಸರ್ಕಾರದ ಸೌಲಭ್ಯಗಳ ಕುರಿತು ಅರಿವು ಮೂಡಿಸಿ

Vijayanagara Vani
ಬಳ್ಳಾರಿ,ಆ.14
ಅಲ್ಪಸಂಖ್ಯಾತ ಸಮುದಾಯಗಳನ್ನು ಆರ್ಥಿಕ ಮತ್ತು ಭೌತಿಕವಾಗಿ ಸದೃಢಗೊಳಿಸಲು ಅವರಿಗಿರುವ ಸರ್ಕಾರದ ಸೌಲಭ್ಯಗಳ ಕುರಿತು ಸಮುದಾಯ ಮಟ್ಟದಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲ್ಪಸಂಖ್ಯಾತರಿಗೆ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಆರ್ಥಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಸಮಾನ ಹಂಚಿಕೆ, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಣೆಗಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಅಲ್ಪಸಂಖ್ಯಾತರ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸಲು ಐಸಿಡಿಎಸ್ ಸೇವೆಗಳನ್ನು ಸಮಾನವಾಗಿ ದೊರೆಯುವಂತೆ ಮಾಡಬೇಕು. ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು, ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು. ಹೀಗೆ ಹಲವು ಕಾರ್ಯಕ್ರಮಗಳು ಬಗ್ಗೆ ನಿರ್ದೇಶನ ನೀಡಿದರು.
*ಕೌಶಲ್ಯ ತರಬೇತಿ ನೀಡಿ:*
ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಾಗಿ ವಿದ್ಯಾಭ್ಯಾಸಕ್ಕೆ ಒತ್ತು ನೀಡುವುದಿಲ. ನಮ್ಮಲ್ಲಿ ಹೆಚ್ಚಾಗಿ ಕೈಗಾರಿಕಾ ವಲಯಗಳಿದ್ದು, ಜಿಟಿಟಿಸಿ, ಐಟಿಐ ಪೂರ್ಣಗೊಳಿಸಿದವರಿಗೆ ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯೋಜನೆ ರೂಪಿಸಬೇಕು. ಈ ಕುರಿತು ಜಿಪಂ ಸಿಇಒ ಅವರ ಜೊತೆ ಚರ್ಚಿಸಿ ಎಂದರಲ್ಲದೇ ಬೇಕಾದ ಅನುದಾನ ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಹೇಳಿದರು.
15 ಅಂಶಗಳ ಕಾರ್ಯಕ್ರಮಗಳಲ್ಲಿ ಸಂಬAಧಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಸೌಕರ್ಯ ನೀಡಬೇಕು. ಶಿಕ್ಷಣ ಇಲಾಖೆಯ ಎಲ್ಲಾ ಸೌಲಭ್ಯ ಕಲ್ಪಿಸಬೇಕು. ಕೃಷಿ ಇಲಾಖೆಯಲ್ಲಿ ಬರುವ ಸೂಕ್ಷö್ಮ ನೀರಾವರಿ, ಕೃಷಿ ಯಾಂತ್ರೀಕರಣ ಮತ್ತು ಬಿತ್ತನೆ ಬೀಜ ವಿತರಣೆಗೆ ಕ್ರಮ ವಹಿಸುವುದು. ತೋಟಗಾರಿಕೆ ಇಲಾಖೆಯಲ್ಲಿ ಬರುವ ವಿವಿಧ ಯೋಜನೆಗಳಡಿ ಸಹಾಯಧನ ಹಾಗೂ ಯೋಜನೆಗಳನ್ನು ನೀಡಬೇಕು ಎಂದು ಹೇಳಿದರು.
ಯೋಜನೆಗಳ ಹೊರತುಪಡಿಸಿಯೂ ಶಾಲೆಯಿಂದ ಹೊರಗುಳಿಯದಂತೆ ಪೋಷಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ಪದ್ಧತಿ, ಮಾದಕ ವಸ್ತುಗಳಿಂದ ದೂರವಿರುವಂತೆ ಅರಿವು ಮೂಡಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು(ಪ್ರಭಾರ), ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತಾ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
error: Content is protected !!
";