Ad image

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಿ; ತಂಬಾಕು ಮುಕ್ತ ಜಿಲ್ಲೆಯಾಗಿಸಲು ಕಾರ್ಯಕ್ರಮ ರೂಪಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು

Vijayanagara Vani
ಧಾರವಾಡ  ಮಾ.28: ತಂಬಾಕು ಉತ್ಪನ್ನ ಸೇರಿದಂತೆ ಎಲ್ಲ ಆರೋಗ್ಯ ಹಾನಿಕರವಾದ ಧೂಮಪಾನ, ಮದ್ಯಪಾನಗಳನ್ನು ಜಿಲ್ಲೆಯಲ್ಲಿ ನಿಯಂತ್ರಿಸಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಯಾವುದೇ ಲೋಪಗಳಾಗದಂತೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ತಂಬಾಕು ನಿಯಂತ್ರಣ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಶಾಲೆ, ಕಾಲೇಜುಗಳ ಸುತ್ತಮುತ್ತಲೂ ಯಾವುದೇ ಅಂಗಡಿಗಳಲ್ಲಿ ತಂಬಾಕು, ಸೀಗರೆಟ್ ಮಾರಾಟ ಮಾಡದಂತೆ ನಿಯಂತ್ರಿಸಬೇಕು. ತಪ್ಪಿತಸ್ಥರಿಗೆ ಹೆಚ್ಚುವರಿ ದಂಡ ವಿಧಿಸಿ, ಎಚ್ಚರಿಕೆ ನೀಡಬೇಕೆಂದು ಅವರು ಹೇಳಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು ತಂಬಾಕು ತಪಾಸಣೆಗೆ ಹೋದಾಗ ಪೊಲೀಸ್ ಇಲಾಖೆ ಸೂಕ್ತ ಪೊಲೀಸ್ ಬಂದೊಬಸ್ತ ನೀಡಬೇಕು. ಅನುಮತಿ ಇರದ ಉತ್ಪನ್ನಗಳನ್ನು ಪತ್ತೆ ಹಚ್ಚಿ, ಹೆಚ್ಚುವರಿ ದಂಡ ವಿಧಿಸಿ, ವ್ಯಾಪಕ ಪ್ರಚಾರ ನೀಡಬೇಕು. ಶಾಲಾ ಮಕ್ಕಳಲ್ಲಿ ಹಾಗೂ ಅವರ ಪಾಲಕರಲ್ಲಿ ತಂಬಾಕು ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.
ಜಿಲ್ಲೆಯ 26 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಮಾಡಲಾಗಿದೆ. ಸುಮಾರು 89 ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಎಂದು ಅವರು ಹೇಳಿದರು.
ಜಿಲ್ಲೆಯ 189 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನಾಗಿ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಸ್ಥಳಗಳಿಗೆ ದಿಡೀರ್ ತಪಾಸಣೆ ನೀಡಿ, ಅನುಮತಿ ಇಲ್ಲದ ಔಷದಿ,ü ತಂಬಾಕು ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕಲಾಗಿದೆ ಮತ್ತು ದಂಡ ವಿಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಬಿದಿ ನಾಯಿಗಳನ್ನು ನಿಯಂತ್ರಿಸಿ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿದ್ದು, ಅವುಗಳನ್ನು ನಿಯಂತ್ರಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ ಜರುಗಿಸಿ, ಮಾತನಾಡಿದರು.
ಬೀದಿ ನಾಯಿಗಳ ಸಂತಾನಹರಣ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮುಖ್ಯವಾಗಿ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಅನುಸರಿಸಬೇಕು. ಧಾರವಾಡ ಸಪ್ತಾಪೂರ, ನೆಹರು ಮಾರುಕಟ್ಟೆ, ಶಿವಾಜಿ ಸರ್ಕಲ್ ಸುತ್ತಮುತ್ತ ತ್ಯಾಜ್ಯದಿಂದ ಹೆಚ್ಚು ಬೀದಿ ನಾಯಿಗಳು ಸೇರುತ್ತವೆ. ಮಹಾನಗರ ಪಾಲಿಕೆ ಸೂಕ್ತ ಕ್ರಮ ವಹಿಸಿ, ಇದನ್ನು ನಿಯಂತ್ರಿಸಬೇಕು ಮತ್ತು ಖಾನಾವಳಿ, ಹೋಟೆಲ್, ಮಾಂಸದ ಅಂಗಡಿಗಳ ಮಾಲೀಕರಿಗೆ ನೈರ್ಮಲ್ಯ, ಸ್ವಚ್ಛತೆ ಬಗ್ಗೆ ತಿಳುವಳಿಕೆ ನೀಡಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.
ನಾಟಿ ವೈದ್ಯರಿಗೆ ಜಾಗೃತಿ ಮೂಡಿಸಿ: ಗ್ರಾಮೀಣ ಭಾಗದಲ್ಲಿ ಹಾಗೂ ಹುಬ್ಬಳ್ಳಿ ನಗರದಲ್ಲಿ ಹಾವು ಕಡಿತ, ನಾಯಿ ಕಡಿತಗಳಿಗೆ ನಾಟಿ ವೈದ್ಯರು ಗಿಡಮೂಲಿಕೆಗಳ ಔಷಧಿ ನೀಡುತ್ತಾರೆ. ಇದು ವೈಜ್ಞಾನಿಕ ಪದ್ಧತಿ ಅಲ್ಲ. ನಾಟಿ ವೈದ್ಯರಿಗೆ ವೈದ್ಯಕೀಯ ಹಿನ್ನೆಲೆ, ಓದು, ಅನುಭವ ಇರುವುದಿಲ್ಲ. ಅವರಿಗೆ ಚಿಕಿತ್ಸೆ ಬಗ್ಗೆ ಸರಿಯಾದ ತಿಳುವಳಿಕೆ ನೀಡಬೇಕು. ಅವರ ಬಳಿ ಚಿಕಿತ್ಸೆಗೆ ಬರುವ ಸಾರ್ವಜನಿಕರನ್ನು ಕಿಮ್ಸ್ ಅಥವಾ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ಸೂಚಿಸಬೇಕು ಎಂದರು.
ಹಾವು ಕಡಿದ ವ್ಯಕ್ತಿಗೆ ಗಿಡಮೂಲಿಕೆ ಔಷಧಿ ಹೆಸರಿನಲ್ಲಿ ಸಮಯ ವ್ಯರ್ಥ ಮಾಡಿದರೆ, ಸಂಬಂಧಿಸಿದವರ ಮೇಲೆ ಅಗತ್ಯವಿದ್ದಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಪರಶುರಾಮ ಎಫ್. ಕೆ. ಅವರು ಪ್ರಗತಿ ವರದಿಯೊಂದಿಗೆ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ, ಆರ್.ಸಿ.ಎಚ್. ಅಧಿಕಾರಿ ಡಾ. ಸುಜಾತಾ ಹಸವೀಮಠ, ಧಾರವಾಡ ತಾಲೂಕು ವೈದ್ಯಾಧಿಕಾರಿ ಡಾ.ಕೆ.ಎನ್. ತನುಜಾ ಸೇರಿದಂತೆ ಎಲ್ಲ ತಾಲೂಕುಗಳ ವೈದ್ಯಾಧಿಕಾರಿಗಳು ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

Share This Article
error: Content is protected !!
";