ಬಳ್ಳಾರಿ,ಜ.02
ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನ್ವಯ ಸಮಾಜದಲ್ಲಿನ 6-14ವರ್ಷದೋಳಗೆ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಹೇಳಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009’ ರ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕಿದ್ದು, ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸುವುದು ವಿವಿಧ ಇಲಾಖೆ ಅಧಿಕಾರಿಗಳ ಜವಬ್ದಾರಿಯಾಗಿದೆ ಎಂದರು.
ಆರ್‌ಟಿಇ-2009 ಸೆಕ್ಸನ್ 10 ಪ್ರಕಾರ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲವಾದಲ್ಲಿ ಆರ್‌ಟಿಇ ಕಾಯ್ದೆ ಸೆಕ್ಷನ್ 11ರ ಪ್ರಕಾರ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಕರೆತರುವ ಕೆಲಸ ಮಾಡಬೇಕು. ಜೊತೆಗೆ ಯಾವ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ವಿಫಲಗೊಂಡಲ್ಲಿ ಶಿಸ್ತು ಕ್ರಮಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜನಸಾಮಾನ್ಯರಿಗೆ ಮನವರಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳ ಮೇಲಿನ ದೌರ್ಜನ್ಯ, ಹಲ್ಲೆ, ಶೋಷಣೆ ತಾರತಮ್ಯ ಹಾಗೂ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ನೀತಿ-2016, ತಿದ್ದುಪಡಿ ಕಾಯ್ದೆ-2023ರ ನಿಯಮಗಳನ್ನು ಪಾಲಿಸಬೇಕು. ಗ್ರಾಮ ಪಂಚಾಯತ್ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಸಕಾಲದಲ್ಲಿ ಸಭೆ ನಡೆಸಿ, ಮಕ್ಕಳ ಶಿಕ್ಷಣ ಕಾರ್ಯಪಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಕ್ಕಳ ರಕ್ಷಣೆಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
ಮಕ್ಕಳ ರಕ್ಷಣಾ ನೀತಿ ಅನ್ವಯ ಪ್ರತಿಯೊಂದು ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ 1098 ಫಲಕ ಹಾಗೂ ಸಲಹಾ ಪೆಟ್ಟಿಗೆ ಅಳವಡಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ಹೆಚ್.ಸಿ ರಾಘವೇಂದ್ರ ಅವರು ಉಪನ್ಯಾಸದಲ್ಲಿ ಮಾತನಾಡುತ್ತಾ, ಮಕ್ಕಳ ಬಾಲ್ಯ ಅಮೂಲ್ಯವಾಗಿದ್ದು, ಅವರ ಬಾಲ್ಯತನವನ್ನು ಸುಂದರಗೊಳಿಸಲು ಶಿಕ್ಷಣ ಮುಖ್ಯವಾಗಿದೆ ಎಂದರು.
ಜೀವಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಸ್ವಾತಂತ್ರö್ಯ, ಸಮಾನತೆ, ಆರೋಗ್ಯ, ವಸತಿ ಸೇರಿದಂತೆ ಸಂವಿಧಾನದಲ್ಲಿ 21ಎ ಅಡಿ ಶಿಕ್ಷಣವೂ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳಿಗೆ ದೈಹಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸೇರಿದಂತೆ ಇತರೆ ವಿಷಯಗಳಲ್ಲಿ ವಂಚನೆಗೆ ಒಳಗಾದಲ್ಲಿ, ಅಭಿಪ್ರಾಯ ವ್ಯಕ್ತ ಪಡಿಸುವ ಮುಕ್ತ ಅವಕಾಶದ ವಾತವರಣ ಹಾಗೂ ಪ್ರಶ್ನೆ ಕೇಳುವ ಮನೋಭಾವನೆ ಬೆಳೆಸಿಕೊಳ್ಳಲು ಮಕ್ಕಳಿಗೆ ಧೈರ್ಯ ತುಂಬಬೇಕು ಎಂದು ಹೇಳುತ್ತಾ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ ವಿವಿಧ ವಿಷಯಗಳು ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈಸೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.
———-