ಧಾರವಾಡ ಮಾರ್ಚ್ 24: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಎರಡನೇಯ ದಿನವಾದ ಇಂದು ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆಯುತ್ತಿದ್ದಾರೆ.
ಜಿಲ್ಲಾ ಪಂಚಾಯತ ಮೂರನೇ ಮಹಡಿಯಲ್ಲಿ ಸ್ಥಾಪಿಸಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೊಠಡಿಗಳ ನೇರ ವೀಕ್ಷಣೆಗೆ ಸ್ಥಾಪಿಸಿರುವ ಜಿಲ್ಲಾ ವೆಬ್ಕಾಸ್ಟಿಂಗ್ ಕೇಂದ್ರಕ್ಕೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ದಿಢೀರ್ ಭೇಟಿ, ಪರೀಕ್ಷಾ ಕೊಠಡಿಗಳ ಲೈವ್ ಸ್ಟ್ರೀಮಿಂಗ್ ವೀಕ್ಷಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ ಸುಸೂತ್ರವಾಗಿ ಪರೀಕ್ಷೆಗಳು ನಡೆದಿರುವ ಕುರಿತು ಖಚಿತಪಡಿಸಿಕೊಂಡರು. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಶಾಂತತೆ, ಶಿಸ್ತು ಇರುವಂತೆ ನೋಡಿಕೊಳ್ಳಲು ಪರೀಕ್ಷಾ ಕೇಂದ್ರಗಳ ಮುಖ್ಯ ಪರೀಕ್ಷಾಧಿಕಾರಿಗಳಿಗೆ ಅವರು ಸೂಚಿಸಿದರು.
ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವಂತೆ ಮುಕ್ತ ವಾತಾವರಣ ಕಲ್ಪಿಸಬೇಕು. ಯಾವುದೇ ರೀತಿಯಲ್ಲಿ ನಕಲು ಆಗದಂತೆ ಎಚ್ಚರಿಕೆ ವಹಿಸಬೇಕು. ವೆಬ್ಕಾಸ್ಟಿಂಗ್ ಕೇಂದ್ರದಲ್ಲಿ ನಿರಂತರವಾಗಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಕೊಠಡಿಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ವೆಬ್ಕಾಸ್ಟಿಂಗ್ ಕೇಂದ್ರದ ಮೇಲುಸ್ತುವಾರಿಗಳಾದ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರುಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಡಿವೈಪಿಸಿ ಎಸ್.ಎಮ್.ಹುಡೆದಮನಿ, ಕೇಂದ್ರದ ನೋಡಲ್ ಅಧಿಕಾರಿ ಪ್ರಭಯ್ಯ ಕೆ.ಚಿಕ್ಕಮಠ ಸೇರಿದಂತೆ ಇತರ ಅಧಿಕಾರಿಗಳು ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ನಿಯೋಜಿತ ಸಿಬ್ಬಂದಿಗಳು ಇದ್ದರು.
ಇಂದಿನ ಗಣಿತ ಪರೀಕ್ಷೆ ಹಾಜರಾತಿ: ಇಂದು ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಗಣಿತ ವಿಷಯದಲ್ಲಿ ಹುಬ್ಬಳ್ಳಿ ಶಹರದ 8,796 ವಿದ್ಯಾರ್ಥಿಗಳು ನೊಂದಣಿ ಮಾಡಿದ್ದು, 8,609 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 187 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಧಾರವಾಡ ಶಹರದಲ್ಲಿ 5,351 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 5,254 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 97 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಧಾರವಾಡ ಗ್ರಾಮೀಣದಲ್ಲಿ 3,830 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 3,802 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 28 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣದಲ್ಲಿ 3,731 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 3,697 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 34 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಲಘಟಗಿ ತಾಲೂಕಿನಲ್ಲಿ 2,564 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 2,523 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 41 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕುಂದಗೋಳ ತಾಲೂಕಿನಲ್ಲಿ 1,974 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 1,945 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 29 ವಿದ್ಯಾರ್ಥಿಗಳು ಗೈರಾಗಿದ್ದಾರೆ. ನವಲಗುಂದ ತಾಲೂಕಿನಲ್ಲಿ 2,503 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, 2,472 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಒಟ್ಟು 28,749 ವಿದ್ಯಾರ್ಥಿಗಳು ಗಣಿತ ಪರೀಕ್ಷೆಗೆ ನೋಂದಣಿ ಮಾಡಿದ್ದು ಈ ಪೈಕಿ 28,302 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 447 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.