ಕೊಪ್ಪಳ ಮೇ 21 ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 2025ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2ರ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ಪರೀಕ್ಷೆಗಳು ಮೇ 26 ರಿಂದ ಜೂನ್ 2ರ ವರೆಗೆ ಜರುಗಲಿದ್ದು, ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಪರೀಕ್ಷೆಗಳನ್ನು ನಡೆಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಅಗತ್ಯ ಕುಡಿಯುವ ನೀರು ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಲು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಲ್ಲಿರಿಸಿ, ಪರೀಕ್ಷಾ ದಿನದಂದು ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ನಿಗದಿತ ಸಮಯದಲ್ಲಿ ಪ್ರಶ್ನೆಪತ್ರಿಕೆಗಳನ್ನು ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ, ಇನ್ನುಳಿದವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಅವರು ಮಾತನಾಡಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಜಿಲ್ಲೆಯ ಒಟ್ಟು 10,351 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಗಂಗಾವತಿ ತಾಲ್ಲೂಕಿನ 10, ಕೊಪ್ಪಳ ತಾಲ್ಲೂಕಿನ 10, ಕುಷ್ಟಗಿ ತಾಲ್ಲೂಕಿನ 8 ಹಾಗೂ ಯಲಬುರ್ಗಾ ತಾಲ್ಲೂಕಿನ 7 ಸೇರಿದಂತೆ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಹಾಗೂ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ವಿಭಾಗಗಳ ಪ್ರಶ್ನೆ ಪತ್ರಿಕೆ ಪಾಲಕರಾಗಿರುತ್ತಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ತಾಲ್ಲೂಕು ನೋಡಲ್ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು