ಬೆಂ.ಗ್ರಾ.ಜಿಲ್ಲೆ, ಜೂನ್. 30 :- ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ನಗರ ವೇಗವಾಗಿ ಹಾಗೂ ಆರ್ಥಿಕವಾಗಿ ಬೆಳೆಯುತ್ತಿದೆ. ಅಂದು ಕೆಂಪೇಗೌಡರು ಹಾಕಿದ್ದ ಅಡಿಪಾಯವೇ ಇಂದಿನ ಬೃಹತ್ ಬೆಂಗಳೂರು ನಗರವಾಗಲು ಸಾಧ್ಯವಾಯಿತು. ಕೆಂಪೇಗೌಡರ ಮೂಲಸ್ಥಾನವಾದ ದೇವನಹಳ್ಳಿಯ ಆವತಿ ಗ್ರಾಮದ ವ್ಯಾಪ್ತಿಯಲ್ಲಿ 9.10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು. ಈಗಾಗಲೇ ಕಾಂಪೌಂಡ್ ನಿರ್ಮಾಣಕ್ಕಾಗಿ 50 ಲಕ್ಷ ರೂ. ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿಯ ಅಡಿಗಲ್ಲು ಸಮಾರಂಭ ನೆರವೇರಿಸಲಾಗುವುದು ಎಂದು ಹೇಳಿದರು.
ಕೆಂಪೇಗೌಡರ ತತ್ವ-ಸಿದ್ಧಾಂತಗಳು ಹಾಗೂ ಆದರ್ಶಪ್ರಾಯಗಳನ್ನು ನಾವೇಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕೆಂಪೇಗೌಡರ ಅಭಿವೃದ್ಧಿಯ ದೂರದೃಷ್ಟಿಯಂತೆ ನಮ್ಮ ಗ್ರಾಮಾಂತರ ಜಿಲ್ಲೆಯಲ್ಲಿಯೂ ಸಮಗ್ರ ಅಭಿವೃದ್ಧಿಪಡಿಸಲು ಇನ್ಫೋಸಿಸ್ ಸಂಸ್ಥೆಯ ಸಹಯೋಗದೊಂದಿಗೆ ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳಿಗೆ ಕಾನ್ವೆಂಟ್ ಮಟ್ಟದ ಶಿಕ್ಷಣ ಒದಗಿಸಲು ಚಿಂತನೆಯಲ್ಲಿದ್ದೇವೆ. ಪ್ರತಿಯೊಬ್ಬ ಮಕ್ಕಳಿಗೂ ಒಳ್ಳೆಯ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ಅಂದಾಗ ದೇಶ ಹಾಗೂ ರಾಜ್ಯ ಪ್ರಗತಿ ಸಾಧಿಸಲ ಸಾಧ್ಯ ಎಂದರು.
ಕೆಂಪೇಗೌಡರ ಕನಸಿನ ಬೆಂಗಳೂರು ದಕ್ಷಿಣ ಭಾಗಕ್ಕೆ ವ್ಯಾಪಕವಾಗಿ ಬೆಳೆದಿದ್ದು, ಉತ್ತರ ಭಾಗಕ್ಕೆ ಸಾಕಷ್ಟು ಬೆಳೆಯುತ್ತಿದೆ. ಅನೇಕ ರಾಜ್ಯಗಳ ಇಂಜಿನಿಯರ್ ಗಳು ಕೆಲಸಕ್ಕಾಗಿ ಸಿಲಿಕಾನ್ ಸಿಟಿ ಬೆಂಗಳೂರನ್ನು ಅವಲಂಬಿಸಿದ್ದಾರೆ. ಬೆಂಗಳೂರು ಆರ್ಥಿಕವಾಗಿ, ವ್ಯವಹಾರಿಕವಾಗಿ, ಟೆಕ್ನಾಲಜಿಯಲ್ಲಿ ತುಂಬಾ ಪ್ರಗತಿ ಸಾಧಿಸುತ್ತಾ ಮುನ್ನಡೆದಿದೆ ಎಂದು ಸಚಿವರು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಬಿ.ರಾಜಣ್ಣ ಅವರು ಮಾತಾನಾಡಿ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ನೂರಾರು ಕೆರೆಗಳು-ಕಾಲುವೆ, ಪೇಟೆಗಳನ್ನು ನಿರ್ಮಿಸಿ, ಜನರ ಜೀವನವನ್ನು ರೂಪಿಸಿಕೊಳ್ಳಲು ಬೆಂಗಳೂರು ಮಹಾನಗರವನ್ನು ಕಟ್ಟಿದರು. ಎಲ್ಲಾ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದರು. ಬೆಂಗಳೂರಿನಲ್ಲಿ ಹಲವು ಕುಲ ಕಸುಬುಗಳನ್ನು ಪರಿಚಯಿಸಿ, ಹಲವರಿಗೆ ಉದ್ಯೋಗ ಸೃಷ್ಟಿಸಿ ಆಡಳಿತ ವೈಖರಿ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದಾರೆ. ಬೆಂಗಳೂರು ಇಂದು ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆ ಹಾಗೂ ಕೆಲಸಗಳ ಫಲ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಎ.ಬಿ ಬಸವರಾಜು ಅವರು ಮಾತನಾಡಿ ರಾಜ್ಯವನ್ನ ಆಳ್ವಿಕೆ ಮಾಡಿದ ಕೆಂಪೇಗೌಡರ ವಂಶಸ್ಥರನ್ನು ಸ್ಮರಿಸುತ್ತ, ಕನ್ನಡ ನಾಡನ್ನು ಕನ್ನಡಿಗರೇ ಆಳ್ವಿಕೆ ಮಾಡಿದ ನಾಡು. ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ, ಸಮಾಜ ಸೇವಾ ಗುಣ, ಜೀವನಾದರ್ಶವನ್ನು ನಾವೆಲ್ಲರೂ ರೂಡಿಸಿಕೊಳ್ಳುವ ಜತೆಯಲ್ಲಿ ನಮ್ಮೆಲ್ಲರ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಲಕ್ಷಾಂತರ ಜನರಿಗೆ ಹೊಟ್ಟೆ-ಬಟ್ಟೆ ಕಟ್ಟಿಕೊಳ್ಳಲು ಆಸರೆಯಾಗಿದೆ. ಅದಕ್ಕಾಗಿ ಅವರ ನೆನಪಿನ ಸ್ಮರಣಾರ್ಥವಾಗಿ ಕೆಂಪೇಗೌಡರ ಮ್ಯೂಜಿಯಂ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಮುಂದೆ ಕೆಂಪೇಗೌಡರ ಹುಟ್ಟೂರು ಆವತಿ ಗ್ರಾಮದ ಅಭಿವೃದ್ಧಿಯನ್ನು ಮಾಡಲಾಗುತ್ತದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.
ಬ್ಯಾಟರಾಯನಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಪಿ. ಕೆಂಪೇಗೌಡ ರವರು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಸಮಗ್ರ ಜೀವನದ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.
ಈ ವೇಳೆ ಕೆಂಪೇಗೌಡರ ಕುರಿತು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಜಗನ್ನಾಥ, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸಾಯಿದಾ ಆಯಿಶಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್ ಡಿ.ಎಂ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್ ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಬಿ.ಎಂ ಬೈರೇಗೌಡ, ದೇವನಹಳ್ಳಿ ತಾಲ್ಲೂಕು ಒಕ್ಕಲಿಗ ಸಂಘದ ಕಾರ್ಯದರ್ಶಿ ಮುನಿರಾಜು, ಸಮುದಾಯದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


