ಮಡಿಕೇರಿವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಾವದಾನದಿಂದ ಸಂವಾದ ನಡೆಸಿದರು.
ಆರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾತನಾಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತುಂಬಾ ದೂರವಿದ್ದು, ಬಸ್ ಸೌಲಭ್ಯ ಸಮರ್ಪಕವಾಗಿಲ್ಲದೆ ಕಠಿಣ ಪರಿಸ್ಥಿತಿಯನ್ನು ಪ್ರತಿನಿತ್ಯ ಎದುರಿಸುತ್ತಿದ್ದು, ಈ ಸಂಬಂಧ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಅಂತರ್ಜಾಲ ಸಂಪರ್ಕವಿಲ್ಲದೆ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ತುಂಬಾ ತೊಂದರೆಯಾಗಿದೆ. ಈಗಿರುವ ವೈಫೈ ಸೇವೆ ಒಂದು ಅಥವಾ ಎರಡು ಕೊಠಡಿಗೆ ಸಾಲುವುದಿಲ್ಲ. ಆದ್ದರಿಂದ ಟವರ್ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಆರ್.ಶರಣಪ್ರಕಾಶ ಪಾಟೀಲ ಅವರು ಸದ್ಯ ವೈಪೈ ಸೇವೆಯನ್ನು ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಸೌಲಭ್ಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುಡ್ಡಗಾಡು ಪ್ರದೇಶವಾಗಿರುವುದರಿಂದ ಕೆಲವೊಂದು ಕೊರತೆಗಳನ್ನು ಎದುರಿಸಬೇಕಿದ್ದು, ಸಾಧ್ಯವಾದಷ್ಟು ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದರು.
ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಟದ ಮೈದಾನ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಯೊಬ್ಬರು ಗಮನ ಸೆಳೆದರು.
ಜಾಗ ವಿಶಾಲವಾಗಿ ಇರದಿರುವುದರಿಂದ ಸದ್ಯ ಬಾಸ್ಕೇಟ್ ಬಾಲ್, ವಾಲಿಬಾಲ್, ಇಂತಹ ಆಟಗಳನ್ನು ಆಡಲು ಅಗತ್ಯ ಜಾಗ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಲೇಜಿನ ಆವರಣದಲ್ಲಿ ಕನಿಷ್ಠ 100*100 ಆಟದ ಮೈದಾನ ನಿರ್ಮಾಣ ಮಾಡಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ವೈದ್ಯಕೀಯ ಕಾಲೇಜಿನಲ್ಲಿ ಕುಡಿಯುವ ನೀರಿನ ಸಂಪರ್ಕ ಸಮರ್ಪಕವಾಗಿಲ್ಲ. ಬೇಸಿಗೆ ಸಂದರ್ಭದಲ್ಲಂತೂ ತುಂಬಾ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬರು ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವುದರಿಂದ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಸದ್ಯ ಹೊಸ ಬೋರ್ವೆಲ್ ಅನ್ನು ನಾಳೆಯೇ ಕೊರೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ಮಾತನಾಡಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು. ವಿದ್ಯಾರ್ಥಿ ನಿಲಯ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.
ಹಾಗೆಯೇ ನರ್ಸಿಂಗ್ ಶಿಕ್ಷಣದಲ್ಲಿ ಬೋಧಕರ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಬೇಕು ಎಂದು ವಿದ್ಯಾರ್ಥಿಯೊಬ್ಬರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಆವರಣದಲ್ಲಿ ಪ್ರಾವಿಜನ್ ಸ್ಟೋರ್ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿಯೊಬ್ಬರು ಗಮನ ಸೆಳೆದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರು ಕೆಎಂಎಫ್ ಮಳಿಗೆ ತೆರೆಯಲು ಅವಕಾಶ ಮಾಡುವಂತೆ ಸೂಚಿಸಿದರು.
ಎನ್ಎಚ್ಎಂನಡಿ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವೈದ್ಯರೊಬ್ಬರು ಸಚಿವರ ಗಮನಕ್ಕೆ ತಂದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸುಜಾತಾ ರಾಥೋಡ್ ಅವರು ವೇತನ ಪಾವತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನದಲ್ಲಿ 29 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ನೀಟ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳ ಜೊತೆ ಯಾರೂ ಸಹ ಚೆಲ್ಲಾಟ ಆಡಬಾರದು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಪ್ರತಿಯೊಬ್ಬರದ್ದಾಗಿದೆ. ಈ ಹಿಂದೆ ರಾಜ್ಯದಲ್ಲಿ ಸಿಇಟಿ ಮೂಲಕ ಇಡೀ ದೇಶದಲ್ಲಿಯೇ ಮಾದರಿಯಾಗಿ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಕೇಂದ್ರದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಒಂದೇ ಪರೀಕ್ಷೆ ಮಾಡಲಾಗುತ್ತಿದೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಸೂಕ್ತ ಬಂದೋ ಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು. ಉತ್ತಮ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಂವಾದಕ್ಕೂ ಮೊದಲು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಚಿವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನಲ್ಲಿ ಬೋಧನೆ, ಗ್ರಂಥಾಲಯ ವ್ಯವಸ್ಥೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ‘ಔಷಧಿಯ ಸಸ್ಯವನ’ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಗ್ರಾ.ಪಂ.ಸದಸ್ಯರಾದ ಜಾನ್ಸನ್ ಪಿಂಟೋ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕರಾದ ವಿಶಾಲ್ ಕುಮಾರ್, ಡಾ.ನಂಜುಂಡಯ್ಯ, ಡಾ.ಸತೀಶ್ ಇತರರು ಇದ್ದರು.