ಬಳ್ಳಾರಿ,ಫೆ.27
ಜಿಲ್ಲೆಯಲ್ಲಿ ಮಾ.08 ರಂದು ನಡೆಯುವ ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಬುಡಕಟ್ಟು ಉತ್ಸವ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬುಡಕಟ್ಟು ಉತ್ಸವ ಕಾರ್ಯಕ್ರಮವನ್ನು ಮಾ.08 ರಂದು ಬೆಳಿಗ್ಗೆ 9ಕ್ಕೆ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುವುದು. ಶಿಷ್ಠಾಚಾರದ ನಿಯಮಗಳಂತೆ ಬುಡಕಟ್ಟು ಉತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಬುಡಕಟ್ಟು ಉತ್ಸವ ಆಚರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಬುಡಕಟ್ಟು ಉತ್ಸವ ಆಚರಣೆಗೆ ಸಂಬ0ಧಿಸಿದ0ತೆ ಸ್ವಾಗತ, ಶಿಷ್ಠಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಬುಡಕಟ್ಟು ಉತ್ಸವ ಕಾರ್ಯಕ್ರಮ ನಡೆಯುವ ಮುನ್ಸಿಪಾಲ್ ಕಾಲೇಜು ಮೈದಾನ ಆವರಣವನ್ನು ಸ್ವಚ್ಛಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಆಹಾರ ಹಾಗೂ ಗಣ್ಯರು ಕುಳಿತುಕೊಳ್ಳುವುದಕ್ಕೆ ಆಸನ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದರು.
ಬುಡಕಟ್ಟು ಉತ್ಸವವನ್ನು ವ್ಯವಸ್ಥಿತವಾಗಿ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಇದಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜನಾಕಷðಣಿಯವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಳೀಯ ಹಾಗೂ ಇತರೆ ಜಿಲ್ಲೆಗಳ ಕಲಾವಿದರಿಂದ ವಿವಿಧ ಕಲಾ ಪ್ರಕಾರಗಳು, ಚಿತ್ರಕಲಾ/ಶಿಲ್ಪಾಕಲಾ ಪ್ರದರ್ಶನ, ಕರಕುಶಲ ಪ್ರದರ್ಶನ ಮತ್ತು ಮಾರಾಟ ಹಾಗೂ ಬುಡಕಟ್ಟು ಸಮುದಾಯದ ವೇಷಭೂಷಣ, ಆಭರಣಗಳ ಪ್ರದರ್ಶನ, ಆಹಾರ ಮೇಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಅಂದು ಸಂಜೆ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ, ಮಹಾನಗರ ಪಾಲಿಕೆಯ ಆಯುಕ್ತರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.