ಚಿತ್ರದುರ್ಗಜೂನ್.28:
ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಪಿಸಿ-ಪಿಎನ್ಡಿಟಿ ಕುರಿತು ತರಬೇತಿ ಹಾಗೂ ಜಾಗೃತಿ ಅಭಿಯಾನ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಹಾಗೂ ಸಬಲೀಕರಣಕ್ಕಾಗಿ ಸರ್ಕಾರದ ಯೋಜನೆಗಳ ಕುರಿತು 100 ದಿನಗಳ ವಿಶೇಷ ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ “ಜನನ ಪೂರ್ವ ರೋಗ ಪರೀಕ್ಷೆ ತಂತ್ರಜ್ಞಾನ ನಿಯಂತ್ರಣ ಮತ್ತು ದುರ್ಬಳಕೆ ತಡೆ ಕಾಯ್ದೆ-1994 (ಪಿಸಿ-ಪಿಎನ್ಡಿಟಿ) ಕುರಿತಾದ ಒಂದು ದಿನದ ತರಬೇತಿ ಮತ್ತು ಜಾಗೃತಿ ಅಭಿಯಾನ ನಡೆಯಿತು.
ತರಬೇತಿ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್.ಪವಿತ್ರಾ ಅವರು, ಪಿಸಿಪಿಎನ್ಡಿಟಿ ಕಾಯ್ದೆಯ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಆಗುತ್ತಿರುವ ಬಾಲ್ಯವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.
ಈ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬಗ್ಗೆ ಮತ್ತು ಪಿಸಿಪಿಎನ್ಡಿಟಿ ಕಾಯ್ದೆಯ ಭಿತ್ತಿ ಪತ್ರಗಳನ್ನು ಪ್ರದರ್ಶಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸುಧಾ, ಕಾರ್ಯಕ್ರಮ ವ್ಯವಸ್ಥಾಪಕ ಪ್ರಫುಲ್ಲಚಂದ್ರ, ಜಿಲ್ಲಾ ಮಿಷನ್ ಸಂಯೋಜಕ ಬಿ.ವಿನಯ್, ಜೆಂಡರ್ ಸ್ಪೆಷಲಿಸ್ಟ್ ಡಿ.ಗೀತಾ, ಪಿಎಂಎಂವಿವೈ ಸಂಯೋಜಕ ಚೇತನ್ ಇದ್ದರು.