ಮಡಿಕೇರಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು.
ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುತ್ತೀರ ಎಂದು ಕೇಳಿದರು.
ಇದಕ್ಕೆ ಪ್ರಕ್ರಿಯಿಸಿದ ಸಂತ್ರಸ್ತರು ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಇತರೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಅವರು ಮಾತನಾಡಿ ಸಂತ್ರಸ್ತರಿಗೆ ವಸತಿ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆನ್ನಣ್ಣ ಅವರು ಗೋಣಿಕೊಪ್ಪಲು ಕೀರೆಹೊಳೆ, ಬಾಳೆಲೆ, ಹುದಿಕೇರಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.
ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.