Ad image

ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು: ಮಾರ್ಚ್ 21 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

Vijayanagara Vani
ಕೊಪ್ಪಳ ಮಾರ್ಚ್ 20: ತುಂಗಭದ್ರಾ ಯೋಜನೆಯ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕೆಳ ಮಟ್ಟದ ಕಾಲುವೆಯಡಿ ಹಿಂಗಾರು ಹಂಗಾಮಿಗೆ ಬೆಳೆದು ನಿಂತ ಬೆಳೆಗಳಿಗೆ ಕೊರತೆಯಾಗುವ ನೀರನ್ನು ಒದಗಿಸಲು 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಮಾರ್ಚ್ 21 ರಂದು ಅಪರಾಹ್ನ 4 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂಗಾರು ಹಂಗಾಮಿನಲ್ಲಿ ಲಭ್ಯವಾದ, ಬಳಕೆಯಾದ ಮತ್ತು ಉಳಿತಾಯವಾಗುವ ನೀರನ್ನು ನಿಂತ ಬೆಳೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ಜಲಸಂಪನ್ಮೂಲ ಇಲಾಖೆ ಸಚಿವರು ಆಗಿರುವ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉಪಸ್ಥಿತಿ ವಹಿಸುವರು.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";