ಕೊಪ್ಪಳ ಜೂನ್ 01 ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.
ಅವರು ಶನಿವಾರ ಕೊಪ್ಪಳದ ಚುಕ್ಕನಕಲ್ಲ ರಸ್ತೆಯ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮವನ್ನು ಆಚರಿಸಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ. ಜನಸಾಮಾನ್ಯರನ್ನು ತಂಬಾಕಿನ ದುಷ್ಟರಿಣಾಗಳಿಂದ ರಕ್ಷಿಸಲು ಭಾರತ ಸರ್ಕಾರವು ಒಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ 2003ರಲ್ಲಿ ಕೊಟ್ಪಾ (COTPA) ಕಾಯ್ದೆಯನ್ನು ಜಾರಿಗೊಳಿಸಿದೆ. ಸೆಕ್ಷನ್-4 ಪ್ರಕಾರ ಸಾರ್ವಜನಿಕ ಸ್ಥಗಳಲ್ಲಿ ಧೂಮಪಾನ ಮಾಡುವುದು ನಿಷೇಧ, ಸೆಕ್ಷನ್-5ರ ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು, ಉತ್ತೇಜನ ಪ್ರಯೋಜಕತೆ ನಿಷೇಧ, ಸೆಕ್ಷನ್-6(ಅ) ತಂಬಾಕು ಉತ್ಪನ್ನಗಳು ಅಪ್ರಾಪ್ತ ವಯಸ್ಕರಿಗೆ (18 ವರ್ಷದೊಳಗಿನ ಮಕ್ಕಳು) ಸಿಗದಂತೆ ನಿಯಂತ್ರಣ ಮಾಡುವುದು, ಸೆಕ್ಷನ್-6(ಆ) ಪ್ರಕಾರ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಹಾಗೂ ಅಪ್ರಾಪ್ತ ವಯಸ್ಕರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧ, ಸೆಕ್ಷನ್-6 ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಅಂತರ ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ, ಸೆಕ್ಷನ್-7, 8 ಮತ್ತು 9 ಪ್ರಕಾರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ಧಿಷ್ಠ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕೊಟ್ಪಾ ಕಾಯ್ದೆ-2003 ಕಲಂ 20ರ ಅಡಿಯಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಪಡಿಸಲಾಗುವುದು. ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು. ತಂಬಾಕು ಸೇವೆನೆ ಬಿಟ್ಟು ಬದುಕನ್ನು ಆಯ್ದುಕೊಳ್ಳಿ ಈ ವಿಷಯವನ್ನು ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ, ಸುತ್ತ-ಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸಿ, ತಂಬಾಕು ಮುಕ್ತ ಪರಿಸರ ನಿರ್ಮಿಸಲು ಕರೆ ನೀಡಿದರು.
ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ. ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಪ್ರತಿ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಿಗರೇಟ್, ಬೀಡಿ, ಸಿಗಾರ್, ಹುಕ್ಕಾ ತಂಬಾಕು ವಿಧಗಳಾಗಿವೆ. ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯು ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ. ತಂಬಾಕಿನಲ್ಲಿ ನಿಕೋಟಿನ್ ಎಂಬ ವಿಷಕಾರಕ ಪದಾರ್ಥ ಇರುತ್ತದೆ. ಇದರಲ್ಲಿ 3000 ದಿಂದ 4000 ಅಪಾಯಕಾರಿ ರಾಸಾಯಿನಿಕ ವಿಷಾನಿಲಗಳು ಇರುತ್ತವೆ. ಮಹಿಳೆಯರಲ್ಲೂ ತಂಬಾಕು ಸೇವನೆಯಿಂದ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್, ಕಡಿಮೆ ತೂಕವಿರುವ ಮಗುವಿನ ಜನನ ಹಾಗೂ ಶಿಶುಮರಣ ಸಂಭವಿಸುವ ಹೆಚ್ಚು ಸಾಧ್ಯತೆ ಇರುತ್ತದೆ. ಪ್ರತಿ ವರ್ಷ ವಿಶ್ವದಾದ್ಯಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಅವರು ಮಾತನಾಡಿ, ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಆಕರ್ಷಣೆಯನ್ನು ಬಹಿರಂಗಪಡಿಸುವುದು” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ಪ್ರತಿ ಸಿಗರೇಟ್/ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸುತ್ತದೆ. ಆದ್ದರಿಂದ ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್. ಅವರು ಮಾತನಾಡಿ, ತಂಬಾಕು ತ್ಯಜಿಸುವುದರಿಂದ ಮತ್ತು ವ್ಯಸನಿಗಳು ನಿಲ್ಲಿಸಿದ ಕ್ಷಣದಿಂದ ಶ್ವಾಸಕೋಶ ಮತ್ತು ಹೃದಯ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ವಿವರವಾಗಿ ಮಾತನಾಡಿದರು.
ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಸತೀಶ ಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠನಾಧಿಕಾರಿಗಳಾದ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ ಎ., ಜಿಲ್ಲಾ ಕುಷ್ಠರೋಗ ನಿರ್ಮೂಲಣಾ ಅಧಿಕಾರಿ ಡಾ.ಪ್ರಕಾಶ ಹೆಚ್., ತಾಲೂಕಾ ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಸೋಸಿಯಲ್ ಮೆಡಿಸಿನ್ ವಿಭಾಗದ ಡಾ.ಮನು, ಡಾ.ಅಂಜಲಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು, ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚಕರು ಎನ್.ಸಿ.ಡಿ/ಯು.ಹೆಚ್.ಸಿ ಸಂಯೋಜಕರು ಹಾಗೂ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕೊಪ್ಪಳ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯ ಮೇಲ್ವಿಚಾರಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಪೂರ್ವ ಮತ್ತು ಪವೀತ್ರಾ ಪ್ರಾರ್ಥನೆ ಮಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕೆ. ಅವರು ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ, ಕೊಪ್ಪಳ ಇವರು ಕಾರ್ಯಕ್ರಮ ನಿರೂಪಿಸಿದರು, ಶಾಂತ ಕೆ ಅವರು ಕೊನೆಯಲ್ಲಿ ವಂದಿಸಿದರು.