Ad image

ಕೇಂದ್ರ ಪುರಸ್ಕøತ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಿ: ಯದುವೀರ್

Vijayanagara Vani
ಕೇಂದ್ರ ಪುರಸ್ಕøತ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಿ: ಯದುವೀರ್
ಮಡಿಕೇರಿ ಜು.11-ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಪ್ರಧಾನಮಂತ್ರಿ ಆವಾಜ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಎನ್ಆರ್ಎಲ್ಎಂ, ಸಂಜೀವಿನಿ ,ಲೀಡ್ ಬ್ಯಾಂಕ್ ವತಿಯಿಂದ ಹಲವು ಕಾರ್ಯಕ್ರಮಗಳು ಹೀಗೆ ಕೇಂದ್ರ ಪುರಸ್ಕøತ ಯೋಜನೆಗಳು ವಿವಿಧ ಇಲಾಖೆಗಳಲ್ಲಿ ಜಾರಿಗೊಂಡಿದ್ದು, ಇವುಗಳನ್ನು ಸಮರ್ಪಕವಾಗಿ ಕಾಲಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಕೊಡಗು-ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ನದಿ ಮೂಲ ಸೇರಿದಂತೆ ಮತ್ತಿತರ ಜಲ ಮೂಲಗಳಿಂದ ಕಡ್ಡಾಯವಾಗಿ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು, ಒಂಟಿಯಂಗಡಿ ಮತ್ತಿತರ ಕಡೆಗಳಲ್ಲಿ ನಲ್ಲಿ ನೀರು ಸಂಪರ್ಕ ಪರಿಪೂರ್ಣವಾಗಿ ಅನುಷ್ಠಾನಗೊಂಡಿಲ್ಲ ಎಂದು ದೂರಿದರು.
ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಎಂಜಿನಿಯರ್ಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು. ಅದನ್ನು ಬಿಟ್ಟು ಸ್ಥಳಕ್ಕೆ ಭೇಟಿ ನೀಡದೆ ಮಾಹಿತಿ ನೀಡುವುದು ಸರಿಯಿಲ್ಲ ಎಂದು ಸುಜಾಕುಶಾಲಪ್ಪ ಅವರು ತಾಕೀತು ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಸ್ತೆ ಬದಿ ಗಿಡಗಂಟೆಗಳು ಬೆಳೆದಿದೆ. ವಿರಾಜಪೇಟೆ-ಮಾಕುಟ್ಟ, ಬಾಳೆಲೆ-ಕಾರ್ಮಾಡು ರಸ್ತೆ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿಗಳು ಗುಂಡಿಮಯವಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಜೊತೆಗೆ ಮರದ ದಿಮ್ಮಿಗಳನ್ನು ರಸ್ತೆ ಬದಿಯೇ ಇಟ್ಟುಕೊಂಡು ಸಾಗಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿಯೇ ಒತ್ತಾಯಿಸಿದರು.
ರಸ್ತೆ ಬದಿ ಬೆಳೆದಿರುವ ಗಿಡಗಂಟೆಗಳನ್ನು ಕಡಿಯಬೇಕು. ಜೊತೆಗೆ ಗುಂಡಿಯನ್ನು ಮುಚ್ಚುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.
ಟಿಂಬರ್ ಲಾರಿಗಳು ರಾಜಾರೋಷವಾಗಿ ರಸ್ತೆ ಬದಿ ನಿಲ್ಲಿಸಿಕೊಂಡು ಓಡಾಡುತ್ತಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮವಹಿಸುತ್ತಿಲ್ಲ ಎಂದು ಸುಜಾಕುಶಾಲಪ್ಪ ಅವರು ಸಿಟ್ಟಾದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಈ ಹಿಂದೆಯೇ ಮರದ ದಿಮ್ಮಿಗಳನ್ನು ಕಟಾವಣೆ ಮಾಡುವವರು ಸಣ್ಣ ವಾಹನಗಳಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಭಾಗಮಂಡಲ-ಕರಿಕೆ ರಸ್ತೆ ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆದ ಸಂಸದರು, ಈ ಮಾರ್ಗದ ರಸ್ತೆಯನ್ನು ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ ಅವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ರಸ್ತೆ ಅಭಿವೃದ್ಧಿಗಾಗಿ 12 ಕೋಟಿ ರೂ. ಅನುಮೋದನೆಯಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.
ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು-ಕುಶಾಲನಗರ ಚತುಷ್ಪಥ ರಸ್ತೆ ಸಂಬಂಧಿಸಿದಂತೆ ವಿಷಯ ಪ್ರಸ್ತಾಪಿಸಿ ಮಾತನಾಡಿ ಈ ಯೋಜನೆ ಯಾವ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದರು.
ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೂಸ್ವಾಧೀನ ಪ್ರಕ್ರಿಯೆಯು ಬಹುತೇಕ ಪೂರ್ಣಗೊಂಡಿದ್ದು, ಕೆಲವು ಪ್ರಕರಣಕ್ಕೆ ಪರಿಹಾರ ವಿತರಣೆಗೆ ಬಾಕಿ ಇದೆ. ಅರಣ್ಯ ಇಲಾಖೆಯಿಂದ ಅನುಮತಿ ಸಹ ದೊರೆಯಬೇಕಿದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ವತಿಯಿಂದ 63 ಹೊಸ ಟವರ್ಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಇದರಲ್ಲಿ 30 ಕ್ಕೂ ಹೆಚ್ಚು ಟವರ್ ನಿರ್ಮಾಣ ಮಾಡಲಾಗಿದೆ. ನಾಗರಹೊಳೆ ಸೇರಿದಂತೆ ವಿವಿಧ ಪ್ರದೇಶ ವ್ಯಾಪ್ತಿಯಲ್ಲಿ ಟವರ್ ನಿರ್ಮಾಣಕ್ಕೆ ಬಾಕಿ ಇದೆ ಎಂದು ಬಿಎಸ್ಎನ್ಎಲ್ ವ್ಯವಸ್ಥಾಪಕರು ಮಾಹಿತಿ ನೀಡಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಸುಜಾಕುಶಾಲಪ್ಪ ಅವರು ಕೊಡಗು ಸೇರಿದಂತೆ ಮಲೆನಾಡು ಭಾಗಕ್ಕೆ ಸೋಲಾರ್ ನಿರ್ವಹಣೆ ಕಷ್ಟಸಾಧ್ಯ. ಆದ್ದರಿಂದ ವಿದ್ಯುತ್ ಬೇಡಿಕೆಯನ್ನು ಪೂರೈಸಬೇಕು ಎಂದು ಸೂಚಿಸಿದರು.
ಅರಣ್ಯ ಅಂಚಿನಲ್ಲಿ ಕಾಡಾನೆ ಹಾವಳಿಯಿಂದ ಸೋಲಾರ್ ಉಪಕರಣಗಳು ನಷ್ಟವಾಗಲಿದೆ. ಈ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು. ಈ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸಲಾಗುವುದು ಎಂದು ಸುಜಾ ಕುಶಾಲಪ್ಪ ಅವರು ಹೇಳಿದರು. ಬಾಕಿ ಇರುವ ಗಂಗಾ ಕಲ್ಯಾಣ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕ್ ಇಇ ಅನಿತಾ ಬಾಯಿ ಅವರು ಮಳೆಗಾಲದಲ್ಲಿ ವಿದ್ಯುತ್ ನಿರ್ವಹಣೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಲಾಗಿದೆ. ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ಫಾರ್ಮ್ಗಳನ್ನು ತರಿಸಿಕೊಳ್ಳಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳಿಗೆ ಎರಡು ತಿಂಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಬೇಸಿಗೆ ಅವಧಿಯಲ್ಲಿ ಬರ ನಿರ್ವಹಣೆ ಹಾಗೂ ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ. ಪರಿಹಾರ ವಿತರಣೆಗೆ ಕ್ರಮವಹಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾಹಿತಿ ನೀಡಿದರು.
ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಉತ್ತಮವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಗೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಮಾತನಾಡಿ ತೋಟಗಾರಿಕೆ ಇಲಾಖೆಯಿಂದ ಪೂರೈಸಲಾಗುವ ಕಾಳುಮೆಣಸು ಸೇರಿದಂತೆ ಜಿಲ್ಲೆಯಲ್ಲಿ ಕೃಷಿಕರಿಗೆ ಬೇಡಿಕೆ ಇರುವ ಗಿಡಗಳನ್ನು ಪೂರೈಸುವಂತೆ ನಿರ್ದೇಶನ ನೀಡಿದರು.
ಈ ಕುರಿತು ಮಾತನಾಡಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಯೋಗೇಶ್ ಕಾಳು ಮೆಣಸು ಗಿಡಗಳನ್ನು ಗ್ರಾ.ಪಂ.ಮಟ್ಟದಲ್ಲಿ ವಿತರಿಸಲಾಗಿದೆ. ತಾಳೆಬೆಳೆ ಯೋಜನೆ ಹಾಗೂ ಕೃಷಿ ಯಾಂತ್ರೀಕರಣ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕಾರದ ಗಂಗಾಧರ ನಾಯಕ್ ಅವರು ಕೇಂದ್ರ ಪುರಸ್ಕøತ ಯೋಜನೆಗಳಾದ ಮುದ್ರಾ, ಪಿ.ಎಂ.ಸ್ವನಿಧಿ, ಉಜ್ವಲ, ಜನಸುರಕ್ಷಾ ಯೋಜನೆ ಮತ್ತಿತರ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಮಾಹಿತಿ ಪಡೆದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯಲ್ಲಿ 125 ಪ್ರಕರಣಗಳು ದಾಖಲಾಗಿದ್ದು, ಪೊನ್ನಂಪೇಟೆ ಹಾಗೂ ಕುಶಾಲನಗರದಲ್ಲಿ ಹೆಚ್ಚಾಗಿ ಡೆಂಗ್ಯೂ ಕಂಡುಬಂದಿದೆ. 4 ಪ್ರಕರಣಗಳು ಪಾಸಿಟಿವ್ ಕಂಡುಬಂದಿದ್ದು, 1 ಪ್ರಕರಣವನ್ನು ಹೊರ ಜಿಲ್ಲೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ಜಿಲ್ಲೆಯ ಎಲ್ಲೆಡೆ ಲಾರ್ವ ಸರ್ವೆ ಮಾಡಲಾಗುತ್ತಿದೆ. ನಗರ, ಪಟ್ಟಣ ಪ್ರದೇಶಗಳಲ್ಲಿ ಕಿಂಗ್ ಫಾಗಿಂಗ್ ಮಾಡಲಾಗುತ್ತದೆ ಎಂದರು.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಆರಂಭ ಬಗ್ಗೆ ಮಾಹಿತಿ ಪಡೆದ ಸಂಸದರು ಆದಷ್ಟು ಶೀಘ್ರ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು. ಸಂಚಾರಿ ಆರೋಗ್ಯ ಗಿರಿಜನ ಘಟಕವನ್ನು ಬಲಪಡಿಸುವಂತೆ ಸಂಸದರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ರ್ಯಾಪಿಡ್ ರೆಸ್ಪಾನ್ಸ್ ತಂಡ ಬಲಪಡಿಸುವುದರ ಜೊತೆಗೆ ಅಗತ್ಯ ಬ್ಯಾರಿಕೇಡ್ಗಳನ್ನು ಅಳವಡಿಸಲಾಗುತ್ತದೆ. ಹಾಗೆಯೇ ಕಾಡಾನೆಗಳನ್ನು ಸ್ಥಳಾಂತರಿಸಲು ಮುಂದಾಗಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುಜಾ ಕುಶಾಲಪ್ಪ ಅವರು ಕಾಡಾನೆ ಹಾವಳಿಯನ್ನು ಸ್ಥಳೀಯರ ಸಹಕಾರದಿಂದ ನಿಯಂತ್ರಿಸುವಂತೆ ಸೂಚಿಸಿದರು.
ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಣ್ಯ ಪ್ರದೇಶಗಳು ಲಾಂಟನಗಳು ಹೆಚ್ಚಾಗಿ ಬೆಳೆದಿದ್ದು, ಇವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.
ತಲಕಾವೇರಿ ಸೂಕ್ಷ್ಮ ವನ್ಯಜೀವಿ ಪ್ರದೇಶದಲ್ಲಿ ಮರ ಕಡಿದಿರುವ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸಂಸದರು ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅವರು ಈ ಸಂಬಂಧ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದರು.
ಸ್ವಚ್ಛ ಭಾರತ ಮಿಷನ್ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದ ಸಂಸದರು ಸರಿಯಾಗಿ ನಿರ್ವಹಣೆ ಮಾಡಬೇಕು. ಲಕ್ಷ್ಮಣ ತೀರ್ಥ ನದಿ ಸ್ವಚ್ಛತೆಗೆ ಗಮನಹರಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಮಾತನಾಡಿ ವಿರಾಜಪೇಟೆ ಪಟ್ಟಣದಲ್ಲಿ ಸಂಚಾರ ನಿಯಂತ್ರಣ ಮಾಡಬೇಕು. ಪೊಲೀಸ್ ಠಾಣೆ ಬಳಿ ಎರಡು ಬದಿ ವಾಹನ ನಿಲ್ಲಿಸುತ್ತಾರೆ. ಇದನ್ನು ತಡೆಯಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Share This Article
error: Content is protected !!
";